ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸಾರ್ವಜನಿಕ ಸಾರಿಗೆಯ ಜೀವನಾಡಿಯಾಗಿರುವ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸುವ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಹಿನ್ನೆಲೆ ಬಿಎಂಆರ್‌ಸಿಎಲ್ ವಿಶೇಷ ಜಾಗೃತಿ ಅಭಿಯಾನ ಆರಂಭಿಸಿದೆ.
2024ರಿಂದ ಇಲ್ಲಿವರೆಗೆ ಬೆಂಗಳೂರಿನಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಒಟ್ಟು 9 ಘಟನೆಗಳು ವರದಿಯಾಗಿದ್ದು, ಅವುಗಳಲ್ಲಿ ಸುಮಾರು 5 ಮಂದಿ ಸಾವನ್ನಪ್ಪಿದ್ದು, ಉಳಿದವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಮೆಟ್ರೋ ನಿಲ್ದಾಣಗಳು ಆತ್ಮಹತ್ಯೆ ಪ್ರವೃತ್ತಿಯ “ಹಾಟ್‌ಸ್ಪಾಟ್” ಆಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರದಲ್ಲಿ ವ್ಯತ್ಯಯ ಉಂಟಾಗುವುದರ ಜೊತೆಗೆ ಪ್ರಯಾಣಿಕರು ಕೂಡ ಗಂಟೆಗಳ ಕಾಲ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪರಿಸ್ಥಿತಿಯನ್ನು ತಡೆಯಲು ಬಿಎಂಆರ್‌ಸಿಎಲ್ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡುತ್ತಿದ್ದು, ಕೆಲವು ನಿಲ್ದಾಣಗಳಲ್ಲಿ ಬ್ಯಾರಿಕೇಡ್ ವ್ಯವಸ್ಥೆಯನ್ನೂ ಅಳವಡಿಸಲಾಗಿದೆ. ಜೊತೆಗೆ ಮಾನಸಿಕ ಆರೋಗ್ಯ ಜಾಗೃತಿಗಾಗಿ ನಿಮ್ಹಾನ್ಸ್ ಸಂಸ್ಥೆಯೊಂದಿಗೆ ಕೈಜೋಡಿಸಲಾಗಿದೆ.
ಬಿಎಂಆರ್‌ಸಿಎಲ್ ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ ಡಿಜಿಟಲ್ ಡಿಸ್ಪ್ಲೇಗಳು ಮತ್ತು ಸೈನ್‌ಬೋರ್ಡ್‌ಗಳನ್ನು ಅಳವಡಿಸಿದ್ದು, “ಯೋಚನೆ ಬೇಡ, ಚಿಂತೆ ಬಿಡಿ, ಮಾತಾಡಿ, ದಣಿವಾಗುವುದು ಸಹಜ, ಸಹಾಯ ಕೇಳುವುದು ಸಹಜ” ಎಂಬ ಸಂದೇಶಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಅದೇ ವೇಳೆ ಸಹಾಯವಾಣಿ ಸಂಖ್ಯೆಗಳನ್ನೂ ಪ್ರಕಟಿಸಲಾಗಿದ್ದು, ಮಾನಸಿಕ ಒತ್ತಡದಲ್ಲಿರುವವರು ಅಥವಾ ದುಡುಕಿನ ನಿರ್ಧಾರಗಳ ಆಲೋಚನೆ ಹೊಂದಿರುವವರು ತಕ್ಷಣ ಸಂಪರ್ಕಿಸಿ ಉಚಿತ ಸಮಾಲೋಚನೆ ಹಾಗೂ ನೆರವು ಪಡೆಯುವಂತೆ ಮನವಿ ಮಾಡಲಾಗಿದೆ.
ಪ್ರಯಾಣಿಕರ ಸುರಕ್ಷತೆ ಹಾಗೂ ಜೀವ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇಂತಹ ಘಟನೆಗಳನ್ನು ತಡೆಯಲು ಸಮಗ್ರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

