ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವದ ನಿಮಿತ್ತ ಜ. 18ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜ ಗ್ರಾಮದಲ್ಲಿ 2025-26ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಗದಗ ಜಿಲ್ಲೆಯಿಂದ ಸುಮಿತ್ರಾ ಮೆಣಸಿನಕಾಯಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ತಾಲೂಕಿನ ಬೆಟಗೇರಿಯ ನಿವಾಸಿಯಾಗಿರುವ ಇವರು ಪ್ರಸ್ತುತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿಯಲ್ಲಿ ಗಂಗಾವತಿ ತಾಲೂಕು ಪಂಚಾಯಿತಿಯಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮಹಿಳಾ ಸಬಲೀಕರಣ, ಯುವ ಸಬಲೀಕರಣ, ಆರೋಗ್ಯ, ವಿಶೇಷವಾಗಿ ಹೆಣ್ಣು ಮಕ್ಕಳ ಆರೋಗ್ಯ ಮತ್ತು ನೈರ್ಮಲ್ಯ, ಶಿಕ್ಷಣ, ಜಾಗೃತಿ ಕಾರ್ಯಕ್ರಮಗಳು, ಸ್ವಚ್ಛತೆ ಮತ್ತು ನೈರ್ಮಲ್ಯ, ಮಹಿಳೆಯರಿಗೆ ತರಬೇತಿ ಕಾರ್ಯಕ್ರಮಗಳು, ಗ್ರಾಮೀಣಾಭಿವೃದ್ಧಿ ಮಾಡುವ ನಿಟ್ಟಿನಲ್ಲಿ, ಕೆಲಸಗಳನ್ನು ಸಾಮಾನ್ಯರಿಗೆ ತಲುಪಿಸುವ ಅಂಶಗಳನ್ನು ಗುರುತಿಸಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಒಕ್ಕೂಟಗಳ ರಾಜ್ಯಾಧ್ಯಕ್ಷ ಎಸ್. ಬಾಲಾಜಿ ತಿಳಿಸಿದ್ದಾರೆ.



