ವಿಜಯಸಾಕ್ಷಿ ಸುದ್ದಿ, ಗದಗ: 2025-26ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ (ಏಕರೂಪ ಪದ್ಧತಿಯಲ್ಲಿ) ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಶುಕ್ರವಾರ 2025-26ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ (ಏಕರೂಪ ಪದ್ಧತಿಯಲ್ಲಿ) ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಬಿಳಿ ಜೋಳ ಕೃಷಿ ಹುಟ್ಟುವಳಿ ಖರೀದಿ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 15 ಕ್ವಿಂಟಲ್ನಂತೆ ಗರಿಷ್ಠ 150 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಖರೀದಿಸಲು ಹಾಗೂ ಬಿಳಿ ಜೋಳ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಬಿಳಿ ಜೋಳ ಉತ್ಪನ್ನವನ್ನು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.
ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಎಫ್.ಎ.ಕ್ಯೂ ಗುಣಮಟ್ಟ ಪರಿಶೀಲನೆಗಾಗಿ ಲಭ್ಯವಿರುವ ಅಧಿಕಾರಿ/ಸಿಬ್ಬಂದಿಗಳನ್ನು ಬಳಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಮಾತನಾಡಿ, ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ಗೆ ಬಿಳಿ ಜೋಳ (ಹೈಬ್ರಿಡ್) 3699 ರೂ., ಬಿಳಿ ಜೋಳ (ಮಾಲ್ದಂಡಿ) 3749 ರೂ.ಗಳಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳನ್ವಯ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ ನೇಮಿಸಲಾಗುವ ಉಪಏಜೆನ್ಸಿಗಳಾದ KFCSC/PCARD/PRIMARY MARKETING SOCIETIES ಖರೀದಿಸಲು ಅನುಮೋದನೆಯನ್ನು ನೀಡಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳನ್ವಯ ರೈತರಿಂದ ಬಿಳಿ ಜೋಳ ಉತ್ಪನ್ನವನ್ನು ನೋಂದಣಿಗೆ 1-12-2025ರಿಂದ 31-3-2026ರವರೆಗೆ ಹಾಗೂ ಖರೀದಿ ಕಾರ್ಯಕ್ಕೆ 1-1-2026ರಿಂದ 31-3-2026ರವರೆಗೆ ಅವಧಿಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಕೃಷಿ ಇಲಾಖೆ, ಕೃಷಿ ಮಾರಾಟ ಇಲಾಖೆ, ಕಾನೂನು ಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಜಂಟಿ ಕೃಷಿ ನಿರ್ದೇಶಕರಿಂದ ಮುಂಗಾರು ಹಾಗೂ ಹಿಂಗಾರು ಋತುವಿನಲ್ಲಿ ಬಿತ್ತನೆಯಾಗುವ ಕ್ಷೇತ್ರದ ಬಗ್ಗೆ ಮಾಹಿತಿ ಪಡೆದುಕೊಂಡು ಅದರಂತೆ ಖರೀದಿ ಕೇಂದ್ರವನ್ನು ತೆರೆಯಲು ಜಿಲ್ಲಾ ವ್ಯವಸ್ಥಾಪಕರು, ಕೆ.ಎಫ್.ಸಿ.ಎಸ್.ಸಿ ಗದಗ ಇವರಿಗೆ ಸೂಚಿಸಲಾಯಿತು ಹಾಗೂ ಸರ್ಕಾರ ಬೆಂಬಲ ಬೆಲೆ ಬಿಳಿ ಜೋಳ ಹುಟ್ಟುವಳಿ ಖರೀದಿ ಕುರಿತು ರೈತರು ಸದುಪಯೋಗ ಪಡೆದುಕೊಳ್ಳಲು ರೈತರಿಗೆ ತಿಳುವಳಿಕೆ ನೀಡಲು ಕರಪತ್ರಗಳ ಮೂಲಕ ಹಾಗೂ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲು ತಿಳಿಸಲಾಯಿತು.



