ನವದೆಹಲಿ: ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದ 31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ಈ ಮೂಲಕ ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ರೋಗಿಯ ಆರೋಗ್ಯ ಸ್ಥಿತಿಯ ಕುರಿತು ಎರಡು ವೈದ್ಯಕೀಯ ಮಂಡಳಿಗಳ ಅಭಿಪ್ರಾಯಗಳನ್ನು ಪರಿಗಣಿಸಿದ ಬಳಿಕ ನ್ಯಾಯಾಲಯ ಈ ತೀರ್ಪು ನೀಡಿದೆ. ನ್ಯಾಯಾಲಯದ ಮಾರ್ಗಸೂಚಿಗಳ ಅಡಿಯಲ್ಲಿ ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ನೀಡಿದ ಮೊದಲ ಪ್ರಕರಣ ಇದಾಗಿದೆ.
ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಹರೀಶ್ ರಾಣಾ 2013ರಲ್ಲಿ ಪೇಯಿಂಗ್ ಗೆಸ್ಟ್ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಕೋಮಾಗೆ ಜಾರಿದ್ದರು. ಹರೀಶ್ ರಾಣಾ ಪೋಷಕರು ಮಗನಿಗೆ ದಯಾಮರಣ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ಪ್ರಕರಣವನ್ನು ವಿಚಾರಣೆ ನಡೆಸಿ, ದಯಾಮರಣ ಕುರಿತಂತೆ ಸ್ಪಷ್ಟ ಕಾನೂನು ತರಲು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಪ್ರಾಥಮಿಕ ಮತ್ತು ದ್ವಿತೀಯ ವೈದ್ಯಕೀಯ ಮಂಡಳಿಗಳು ರೋಗಿಯ ಜೀವ ಬೆಂಬಲವನ್ನು ಹಿಂತೆಗೆದುಕೊಳ್ಳಲು ಅನುಮತಿ ನೀಡಿದ ಬಳಿಕ ನ್ಯಾಯಾಂಗ ಹಸ್ತಕ್ಷೇಪ ಸಾಮಾನ್ಯವಾಗಿ ಅಗತ್ಯವಿರುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಜೊತೆಗೆ ಚಿಕಿತ್ಸೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರಗಳ ಕುರಿತು ವೈದ್ಯಕೀಯ ಮಂಡಳಿಗಳಿಂದ ಸಲಹೆ ಪಡೆಯುವಂತೆ ಹೈಕೋರ್ಟ್‌ಗಳಿಗೆ ಸೂಚನೆ ನೀಡಿದೆ.
ಪ್ರಕರಣದ ಹಿನ್ನೆಲೆ:
ಚಂಡೀಗಢದಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದ ಹರೀಶ್ ರಾಣಾ ನಾಲ್ಕನೇ ಮಹಡಿಯಿಂದ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಕೋಮಾಗೆ ಜಾರಿದ್ದರು.
ಅವರಿಗೆ ಪಿಜಿಐ ಚಂಡೀಗಢ, ದೆಹಲಿಯ ಏಮ್ಸ್, ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ, ಲೋಕ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆ ಹಾಗೂ ಫೋರ್ಟಿಸ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಯಾವುದೇ ಸುಧಾರಣೆ ಕಂಡುಬರಲಿಲ್ಲ. ದೀರ್ಘಕಾಲದ ಚಿಕಿತ್ಸೆ ಕುಟುಂಬಕ್ಕೆ ಭಾರವಾಗಿದ್ದ ಕಾರಣ ಹರೀಶ್ ರಾಣಾ ಕುಟುಂಬವು ದಯಾಮರಣ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.



