ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ (50) ಅವರು ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾತ್ರಿ ವೇಳೆ ಅಚಾನಕ್ ತೀವ್ರ ಹೃದಯಾಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮೃತರು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದು, ರಾಜಕೀಯ ಜೀವನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ತಮ್ಮ ರಾಜಕೀಯ ಪಯಣ ಆರಂಭಿಸಿದ್ದ ಸೂರಜ್ ಹೆಗ್ಡೆ, ನಂತರ ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದರು.
ಸದ್ಯ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇಷ್ಟು ಚಿಕ್ಕ ವಯಸ್ಸಿನಲ್ಲಿ ಸಕ್ರಿಯ ನಾಯಕನ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ ಎಂದು ನಾಯಕರು ಹೇಳಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಸಹಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.



