ಬೆಂಗಳೂರು:- ಶೌಚಾಲಯ ಮತ್ತು ಕುಡಿಯುವ ನೀರು ಲಭ್ಯತೆ ಕೊರತೆ ಎದುರಿಸುತ್ತಿದ್ದ ರಾಜ್ಯದ 551 ಶಾಲೆಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಅವುಗಳಲ್ಲಿ 482 ಶಾಲೆಗಳ ಸ್ಥಿತಿ ತೃಪ್ತಿಕರವಾಗಿದೆ ಮತ್ತು 69 ಶಾಲೆಗಳ ಸ್ಥಿತಿ ತೃಪ್ತಿಕರವಾಗಿಲ್ಲ ಎಂಬುದು ಸಮೀಕ್ಷೆಯಿಂದ ಕಂಡು ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆಯೇ ಹೈಕೋರ್ಟ್‌ಗೆ ತಿಳಿಸಿದೆ.
ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತಂತೆ ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ವರದಿ ಸಲ್ಲಿಸಿದ ವಕೀಲರು: ಆಗ ಸರ್ಕಾರಿ ವಕೀಲರು, ನ್ಯಾಯಾಲಯದ ನಿರ್ದೇಶನದಂತೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಪ್ರತಿನಿಧಿಗಳ ಸಮಕ್ಷಮದಲ್ಲಿ ಶಾಲೆಗಳ ಸಮೀಕ್ಷೆ ನಡೆಸಲಾಗಿದ್ದು, ಅದರ ವರದಿಯನ್ನು ಶಿಕ್ಷಣ ಇಲಾಖೆ ಆಯುಕ್ತೆ ಬಿ. ಬಿ. ಕಾವೇರಿ ಅವರ ಪರವಾಗಿ ಸಲ್ಲಿಸುತ್ತಿದ್ದೇನೆ. ಎಲ್ಲೆಲ್ಲಿ ಅತೃಪ್ತಿ ವ್ಯಕ್ತಪಡಿಸಲಾಗಿದೆಯೋ ಅಂತಹ ಕಡೆ ಮೂಲಸೌಕರ್ಯ ವೃದ್ಧಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಅದಕ್ಕೆ ಪ್ರಕರಣದಲ್ಲಿನ್ಯಾಯಾಲಯಕ್ಕೆ ಸಹಕರಿಸಲು ಅಮಿಕಸ್ ಕ್ಯೂರಿಯಾಗಿ ನೇಮಕಗೊಂಡಿರುವ ಹಿರಿಯ ವಕೀಲರು ಈಗಷ್ಟೇ ವರದಿ ಕೈ ಸೇರಿದೆ. ಅದನ್ನು ಪರಿಶೀಲಿಸಿ ತಮ್ಮ ಅಭಿಪ್ರಾಯ ಮಂಡಿಸಲಾಗುವುದು ಎಂದು ಹೇಳಿದರು.