ಮಡಿಕೇರಿ: ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟಿಗೇರಿ ಪ್ರದೇಶದಲ್ಲಿ ತೋಟದ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ನಾಲ್ವರು ಶಂಕಿತ ವಲಸಿಗರು ಪತ್ತೆಯಾಗಿದ್ದಾರೆ.
ಹಿಂದೂ ಜಾಗರಣ ವೇದಿಕೆ ಹಾಗೂ ಆಟೋ ಚಾಲಕರ ಸಂಘದ ಸದಸ್ಯರು ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
ಪತ್ತೆಯಾದ ನಾಲ್ವರಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬರ ಮೂಲಕ ಭಾರತಕ್ಕೆ ಬಂದಿರುವುದಾಗಿ ಅವರು ಹೇಳಿಕೊಂಡಿದ್ದಾರೆ ಎಂದು ಸಂಘಟನೆಗಳ ಸದಸ್ಯರು ತಿಳಿಸಿದ್ದಾರೆ.
ಇದಲ್ಲದೆ, ಅವರ ಬಳಿ ಬೆಂಗಳೂರು ನೋಂದಣಿಯ ದ್ವಿಚಕ್ರ ವಾಹನ ಪತ್ತೆಯಾಗಿದೆ ಎಂಬ ಮಾಹಿತಿಯೂ ಹೊರಬಿದ್ದಿದೆ. ಹೀಗಾಗಿ ನಾಲ್ವರ ಗುರುತು, ಅವರು ಹೊಂದಿರುವ ದಾಖಲೆಗಳು ಹಾಗೂ ಕೊಡಗಿಗೆ ಬಂದಿರುವ ಉದ್ದೇಶದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂಬ ಒತ್ತಾಯ ಕೇಳಿಬಂದಿದೆ.
ಜಿಲ್ಲೆಯಲ್ಲಿ ಅಕ್ರಮ ವಲಸಿಗರ ಕುರಿತು ಈ ಹಿಂದೆಯೂ ಮಾಹಿತಿ ನೀಡಿದ್ದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಗುಪ್ತಚರ ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾಲ್ವರ ಹಿನ್ನೆಲೆ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಪ್ರಕರಣದ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು ಎಂದು ಸಂಘಟನೆಗಳ ಸದಸ್ಯರು ಆಗ್ರಹಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.



