ಕಲಬುರಗಿ: ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೇ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಶರಣಶಿರಸಗಿ ಬಳಿ ನಡೆದಿದೆ.
ರೇಣುಕಾ ಶಿಂಧೆ (38) ಕೊಲೆಯಾದ ಮಹಿಳೆ. ಕೆಲ ವರ್ಷಗಳ ಹಿಂದೆ ಸಂಜಯ್ ಎಂಬುವವರನ್ನು ವಿವಾಹವಾಗಿದ್ದ ರೇಣುಕಾ, ಪತಿ ಜೊತೆ ಶರಣಶಿರಸಗಿ ಬಳಿ ವಾಸವಾಗಿದ್ದರು.
ಪತ್ನಿ ಪರಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಸಂಜಯ್ ಅನುಮಾನಪಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಹಲವು ಬಾರಿ ಜಗಳ ನಡೆದಿತ್ತು.
ನಿನ್ನೆ ರಾತ್ರಿ ಕೂಡ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪತಿ-ಪತ್ನಿ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿದ್ದು, ಸಂಜಯ್ ರೇಣುಕಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



