ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ದೋಟಿಕೊಳ್ ಗ್ರಾಮದಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಕೊಲೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ದೋಟಿಕೊಳ್ ಗ್ರಾಮದ ಜಮೀನಿನಲ್ಲಿ ಬೆಳೆ ಕಾಯಲು ಮಲಗಿದ್ದ ಶರಣು ಭಾಸಗಿ (25) ಮೃತ ಯುವಕನಾಗಿದ್ದಾನೆ. ಹೊಲದಲ್ಲಿ ಮಲಗಿದ್ದ ಶರಣು ಬಳಿಕ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ದೋಟಿಕೊಳ್ ಕೆರೆಯ ಬಳಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಕುಟುಂಬಸ್ಥರು ಇದೊಂದು ಸಹಜ ಸಾವು ಅಲ್ಲ, ಕೊಲೆ ಆಗಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳದ ಸಹಾಯದಿಂದ ತನಿಖೆ ಮುಂದುವರಿಸಲಾಗಿದೆ. ಘಟನೆ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



