ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡ ಮಹಾನಗರದ ಕೆಲ ಮಸೀದಿಗಳಲ್ಲಿ ಅಪರಿಚಿತ ಹಾಗೂ ಅನುಮಾನಾಸ್ಪದವಾಗಿ ಬೇರೆ ದೇಶದ ವ್ಯಕ್ತಿಗಳು ಓಡಾಡುತ್ತಿದ್ದಾರೆ. ಹೀಗಾಗಿ ಪೊಲೀಸ್ ಆಯುಕ್ತರು ಪರಿಶೀಲಿಸುವಂತೆ ಶಾಸಕ ಅರವಿಂದ್ ಬೆಲ್ಲದ್ ಅವರು ಪತ್ರ ಬರೆದಿದ್ದಾರೆ.
ಮೇ 17ರಂದು ಬೆಲ್ಲದ್ ಅವರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೆಲ ಮಸೀದಿಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರು ಸ್ಥಳೀಯರು ಅಲ್ಲ ಎಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಹೀಗೆ ಓಡಾಡುತ್ತಿರುವವರಲ್ಲಿ ಹೊಸ ಮುಖ, ಅಪರಿಚಿತ, ಅನುಮಾನಾಸ್ಪದ ವ್ಯಕ್ತಿಗಳೇ ಹೆಚ್ಚಾಗಿದ್ದಾರೆ. ಅವರು ಹೊರ ದೇಶದ ಪ್ರಜೆಗಳಂತೆ ಭಾಸವಾಗುತ್ತಾರೆ. ಅವಳಿ ನಗರದ ವಿವಿಧ ಕೊಳಚೆ ಪ್ರದೇಶದಲ್ಲಿ ವಾಸವಾಗಿದ್ದಾರೆಂಬ ಮಾಹಿತಿಯೂ ಇದೆ. ಅದಕ್ಕಾಗಿ ಈ ಕುರಿತು ಪೊಲೀಸ್ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದ್ದಾರೆ.
ಅವಳಿ ನಗರದಲ್ಲಿರುವ ಅಪರಿಚಿತ, ಹೊಸಮುಖದ ವ್ಯಕ್ತಿಗಳನ್ನು ವಿಚಾರಿಸಿ ಸೂಕ್ತ ಕ್ರಮ ಜರುಗಿಸಬೇಕು. ಇದರಿಂದ ಮಹಾನಗರದಲ್ಲಿ ಅಹಿತಕರ ಘಟನೆ ಆಗದಂತೆ ತಡೆಯುವ ಕೆಲಸ ಮಾಡಬೇಕೆಂದು ಶಾಸಕ ಬೆಲ್ಲದ್ ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.