ಅರ್ಜಿಗಳ ಶೀಘ್ರ ವಿಲೇವಾರಿಗೆ ಕ್ರಮ ವಹಿಸಿ: ಡಿಸಿ ಸಿ.ಎನ್. ಶ್ರೀಧರ್ ಸೂಚನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಕಾಲ ಯೋಜನೆಯಡಿ ಸ್ವೀಕರಿಸಲಾದ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿಯೇ ವಿಲೇವಾರಿ ಮಾಡುವಂತೆ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಕಾಲ ಯೋಜನೆಯ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜೊತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕು. ಸಕಾಲ ಯೋಜನೆಯಡಿ ಇಲಾಖೆಗಳಿಗೆ ನಿಗದಿಪಡಿಸಿದ ಯೋಜನೆಗಳಲ್ಲಿ ಕಡ್ಡಾಯವಾಗಿ ಅರ್ಜಿಗಳನ್ನು ಸ್ವೀಕರಿಸಬೇಕು. ತಾಂತ್ರಿಕ ತೊಂದರೆಗಳು ಉಂಟಾದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಬೇಕು ಎಂದರು.

ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸುವ ಉದ್ದೇಶಕ್ಕಾಗಿಯೇ ಸಕಾಲ ಯೋಜನೆ ಜಾರಿಗೊಳಿಸಲಾಗಿದ್ದು, ಈ ಕುರಿತು ಹೆಚ್ಚು ನಿಗಾ ವಹಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಬೇಕು. ಸಕಾಲದಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿಪಡಿಸಿದ ವೇಳೆಯಲ್ಲಿ ವಿಲೇವಾರಿ ಮಾಡದಿದ್ದಲ್ಲಿ ಇಲಾಖೆಯ ಅಧಿಕಾರಿಗಳೇ ಹೊಣೆಗಾರರಾತ್ತಾರೆ ಹಾಗೂ ಶಿಸ್ತು ಕ್ರಮಕ್ಕೆ ಒಳಗಾಗಬೇಕಾಗುತ್ತದೆ. ಸಕಾಲ ಯೋಜನೆಯ ಜಿಲ್ಲಾ ಮಟ್ಟದ ಸಭೆಗೆ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಮಾತನಾಡಿ, ಇಲಾಖೆಯ ಅಧಿಕಾರಿಗಳು ಸಕಾಲ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದ ಕುಮಾರ್ ಹೆಗ್ಗಳಗಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಸಮಾಜ ಕಲ್ಯಾಣ, ನಗರಸಭೆ, ಕೆ.ಎಸ್.ಆರ್.ಟಿ.ಸಿ ಸೇರಿದಂತೆ ವಿವಿಧ ಇಲಾಖೆಯವರು ಸಕಾಲ ಯೋಜನೆಯ ಅರ್ಜಿಗಳ ವಿಳಂಬ ತಪ್ಪಿಸಿ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.


Spread the love

LEAVE A REPLY

Please enter your comment!
Please enter your name here