ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆಯಲ್ಲಿ ಚುನಾಯಿತ ಆಡಳಿತ ಮಂಡಳಿ ಇದ್ದರೂ ಸಹ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯದೇ ರಾಜಕೀಯ ದೊಂಬರಾಟಕ್ಕೆ ಸಾq್ಷಯಾಗಿದೆ. ಮೀಸಲಾತಿ ಪ್ರಕಟವಾಗಿ ಚುನಾವಣೆ ನಡೆಸದೇ ಇರುವುದರಿಂದ ನಗರಸಭೆಯಲ್ಲಿ ಅಧಿಕಾರಿಗಳು ದರ್ಬಾರ್ ನಡೆಸುವಂತಾಗಿದೆ. ಗದಗ-ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಈಗಿನ ರಾಜಕೀಯ ದೊಂಬರಾಟಕ್ಕೆ ಕಡಿವಾಣ ಹಾಕಬೇಕೆಂದು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಗರದ ಅಭಿವೃದ್ಧಿಗಾಗಿ ಮೀಸಲಿಟ್ಟ ಕೊಟ್ಯಾಂತರ ರೂ ಅನುದಾನ ಖರ್ಚು ಮಾಡಿದರೂ ಸಹ ನಗರದ ಹಿಂದುಳಿದ ಪ್ರದೇಶಗಳು ಮತ್ತು ಕೊಳಗೇರಿ ಪ್ರದೇಶಗಳ ಅಭಿವೃದ್ಧಿ ಮಾಡಲು ಸಾಧ್ಯವಾಗಲಿಲ್ಲ. ಮುಂಬರುವ ಬೇಸಿಗೆ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ನಗರದ ಸಾರ್ವಜನಿಕರು ಚಿಂತಿಸುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಆಡಳಿತ ವ್ಯವಸ್ಥೆ ಚುರುಕಗೊಳಿಸಲು ಜಿಲ್ಲಾಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.