HomeIndia Newsಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ವಿಜಯ್ ವಿರೋಧ: ಪ್ರಧಾನಿ ಮೋದಿಗೆ ಪತ್ರ ಬರೆದು ಕೇಂದ್ರದ ಮಧ್ಯಪ್ರವೇಶಕ್ಕೆ...

ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ವಿಜಯ್ ವಿರೋಧ: ಪ್ರಧಾನಿ ಮೋದಿಗೆ ಪತ್ರ ಬರೆದು ಕೇಂದ್ರದ ಮಧ್ಯಪ್ರವೇಶಕ್ಕೆ ಆಗ್ರಹ

For Dai;y Updates Join Our whatsapp Group

ಚೆನ್ನೈ: ಕರ್ನಾಟಕದ ಮಹತ್ವಾಕಾಂಕ್ಷಿ ಮೇಕೆದಾಟು ಅಣೆಕಟ್ಟು ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವಾಲಯ ನೀಡಿರುವ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ, ಯೋಜನೆಯಿಂದ ಕೆಳಹರಿವಿನ ರಾಜ್ಯವಾದ ತಮಿಳುನಾಡಿನ ನೀರಿನ ಹಕ್ಕುಗಳಿಗೆ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಮುಂಗಾರು ಅಧಿವೇಶನದ ವೇಳೆ ತಮಿಳುನಾಡು ಸಂಸದ ಡಾ. ಅನ್ಬುಮಣಿ ರಾಮದಾಸ್ ಅವರು ಮೇಕೆದಾಟು ಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಕೇಂದ್ರ ಜಲಶಕ್ತಿ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಲಿಖಿತ ಉತ್ತರ ನೀಡಿದ್ದರು.

ಕರ್ನಾಟಕದ ಗಡಿ ವ್ಯಾಪ್ತಿಯಲ್ಲಿ ನೀರಿನ ಬಳಕೆಗೆ ಆ ರಾಜ್ಯಕ್ಕೆ ಸಂಪೂರ್ಣ ಅಧಿಕಾರವಿದೆ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ನೆರೆ ರಾಜ್ಯಗಳ ಒಪ್ಪಿಗೆ ಪಡೆಯಬೇಕು ಎಂದು ಎಲ್ಲಿಯೂ ಉಲ್ಲೇಖಿಸಲಾಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು. ಅಲ್ಲದೆ, ಕರ್ನಾಟಕವು ಮೇಕೆದಾಟು ಯೋಜನೆಗೆ ತಮಿಳುನಾಡು, ಕೇರಳ ಹಾಗೂ ಪುದುಚೇರಿ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಈ ಹೇಳಿಕೆಯನ್ನು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರೋಧಿಸಿದ್ದು, ಪ್ರಧಾನಿ ಮೋದಿ ಅವರು ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಧಾನಿಗೆ ಬರೆದ ಪತ್ರದಲ್ಲಿ, “ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕೆಳಹರಿವಿನ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ” ಎಂಬ ಕೇಂದ್ರ ಜಲಶಕ್ತಿ ಸಚಿವಾಲಯದ ಅಭಿಪ್ರಾಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಮೇಲ್ಭಾಗದ ರಾಜ್ಯವೊಂದು ಹೊಸ ಯೋಜನೆ ಕೈಗೆತ್ತಿಕೊಳ್ಳುವ ಮುನ್ನ ಕೆಳಹರಿವಿನ ರಾಜ್ಯಗಳ ಹಿತಾಸಕ್ತಿಗಳನ್ನು ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆಲಮಟ್ಟಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿರುವ ವಿಜಯ್, ಕೆಳಹರಿವಿನ ರಾಜ್ಯಗಳ ಹಕ್ಕುಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಏಕಪಕ್ಷೀಯವಾಗಿ ಯೋಜನೆಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮೇಕೆದಾಟು ಯೋಜನೆಯನ್ನು ಕೇವಲ ಕುಡಿಯುವ ನೀರಿನ ಅಥವಾ ಇಂಜಿನಿಯರಿಂಗ್ ಯೋಜನೆಯಾಗಿ ನೋಡಬಾರದು. ಇದು ಕಾವೇರಿ ನದಿ ನೀರಿನ ಹಂಚಿಕೆ ಹಾಗೂ ಲಕ್ಷಾಂತರ ರೈತರ ಜೀವನೋಪಾಯಕ್ಕೆ ಸಂಬಂಧಿಸಿದ ಸೂಕ್ಷ್ಮ ವಿಚಾರವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

2019ರಲ್ಲಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ (DPR)ಯನ್ನು ನಿಯಮಗಳಿಗೆ ಅನುಗುಣವಾಗಿಲ್ಲ ಎಂಬ ಕಾರಣಕ್ಕೆ ಕೇಂದ್ರ ಜಲ ಆಯೋಗವು ವಾಪಸ್ ಕಳುಹಿಸಿದ್ದನ್ನು ವಿಜಯ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಾವೇರಿ ನೀರು ವಿವಾದ ನ್ಯಾಯಾಧಿಕರಣದ ಆದೇಶ ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸಬೇಕು. ಕರ್ನಾಟಕ ಸಲ್ಲಿಸಿರುವ ಮೇಕೆದಾಟು ಯೋಜನೆಯ ಡಿಪಿಆರ್‌ಗೆ ಯಾವುದೇ ಕಾರಣಕ್ಕೂ ಅನುಮತಿ ನೀಡದಂತೆ ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಕೇಂದ್ರ ಜಲ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಅವರು ಪ್ರಧಾನಿ ಮೋದಿಯವರನ್ನು ಆಗ್ರಹಿಸಿದ್ದಾರೆ.

ಇದೇ ವೇಳೆ, 2018ರ ಫೆಬ್ರವರಿ 16ರಂದು ಸುಪ್ರೀಂ ಕೋರ್ಟ್ ನೀಡಿದ ಕಾವೇರಿ ನೀರು ವಿವಾದ ತೀರ್ಪಿನಲ್ಲಿ, ಮೇಲ್ಭಾಗದ ರಾಜ್ಯವಾದ ಕರ್ನಾಟಕವು ಕಾವೇರಿ ನದಿಗೆ ಸಂಬಂಧಿಸಿದ ಯೋಜನೆಗಳಿಗೆ ಕೆಳಹರಿವಿನ ರಾಜ್ಯಗಳ ಅನುಮತಿ ಪಡೆಯುವುದು ಕಡ್ಡಾಯ ಎಂದು ಸ್ಪಷ್ಟವಾಗಿ ಹೇಳಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

2007ರ ಕಾವೇರಿ ನೀರು ವಿವಾದ ನ್ಯಾಯಾಧಿಕರಣದ (CWDT) ತೀರ್ಪಿನ 18ನೇ ವಿಧಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ನ್ಯಾಯಾಧಿಕರಣದ ಆದೇಶಕ್ಕೆ ಒಳಪಟ್ಟು ಆಯಾ ರಾಜ್ಯಗಳು ತಮ್ಮ ಗಡಿ ವ್ಯಾಪ್ತಿಯಲ್ಲಿ ನೀರಿನ ಬಳಕೆ ಹಾಗೂ ಸೌಲಭ್ಯಗಳನ್ನು ನಿರ್ವಹಿಸುವ ಹಕ್ಕು ಹೊಂದಿವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img