ನವದೆಹಲಿ: ಮೇಕೆದಾಟು ಯೋಜನೆ ಜಾರಿಗೊಳಿಸಲು ಕರ್ನಾಟಕವು ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯಗಳ ಪ್ರತ್ಯೇಕ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ.
ರಾಜ್ಯಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಕೇಳಿದ ಪ್ರಶ್ನೆಗೆ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಲಿಖಿತ ಉತ್ತರ ನೀಡಿದರು.
2018ರಲ್ಲಿ ಕಾವೇರಿ ನೀರು ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ, ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ಯೋಜನೆ ಕೈಗೊಳ್ಳಲು ಕರ್ನಾಟಕವು ತಮಿಳುನಾಡು, ಕೇರಳ ಅಥವಾ ಪುದುಚೇರಿಯ ಒಪ್ಪಿಗೆ ಪಡೆಯಬೇಕು ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಕಾವೇರಿ ನೀರು ವಿವಾದ ನ್ಯಾಯಾಧಿಕರಣದ 2007ರ ತೀರ್ಪಿನ 18ನೇ ವಿಧಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಅದರ ಪ್ರಕಾರ ನ್ಯಾಯಾಧಿಕರಣದ ಆದೇಶಕ್ಕೆ ಧಕ್ಕೆಯಾಗದಂತೆ ತಮ್ಮ ಗಡಿಭಾಗದ ವ್ಯಾಪ್ತಿಯಲ್ಲಿ ನೀರಿನ ಬಳಕೆ ಹಾಗೂ ಸೌಲಭ್ಯಗಳನ್ನು ನಿಯಂತ್ರಿಸುವ ಅಧಿಕಾರ ಆಯಾ ರಾಜ್ಯಗಳಿಗೆ ಇದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಕರ್ನಾಟಕ ಸರ್ಕಾರವು 2019ರಲ್ಲಿ ಸಲ್ಲಿಸಿದ್ದ ಮೇಕೆದಾಟು ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಯ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಸರ್ಕಾರ ಹಿಂದಿರುಗಿಸಿದ್ದು, ಕಾವೇರಿ ನ್ಯಾಯಾಧಿಕರಣದ ಆದೇಶ ಹಾಗೂ ಕೇಂದ್ರ ಜಲ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಪರಿಷ್ಕೃತ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.



