ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿಕ್ಷಕರು ಕೇವಲ ಅಕ್ಷರ ಜ್ಞಾನ ನೀಡುವವರಲ್ಲ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶ್ರೇಷ್ಠ ಶಿಲ್ಪಿಗಳಾಗಿದ್ದಾರೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಸಂಸ್ಥಾನಮಠದ ಉತ್ತರಾಧಿಕಾರಿ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ ಶ್ರೀ ಶಂಕರ ಭಾರತಿ ಕಲ್ಯಾಣ ಮಂಟಪದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯಿನಿ ವರಮಹಾಲಕ್ಷ್ಮೀ ಪೂಜಾರ ಅವರ ಕುಟುಂಬದ ವತಿಯಿಂದ ಹಮ್ಮಿಕೊಂಡಿದ್ದ ಕೃತಜ್ಞತಾ ಸಮರ್ಪಣೆ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ದೇವರ ಸ್ಥಾನ ನೀಡಲಾಗಿದ್ದು, ಅಕ್ಷರ ಜ್ಞಾನದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ನೈತಿಕ ಮೌಲ್ಯಗಳನ್ನು ಕಲಿಸುವುದೇ ನಿಜವಾದ ಶಿಕ್ಷಣ ಎಂದು ಶ್ರೀಗಳು ಹೇಳಿದರು. 32 ವರ್ಷಗಳ ಸೇವಾವಧಿಯಲ್ಲಿ ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಬೆಳಕು ನೀಡಿರುವ ವರಮಹಾಲಕ್ಷ್ಮೀ ಪೂಜಾರ ಅವರ ಸೇವೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಡಿಡಿಪಿಐ ಆರ್.ಎಸ್. ಬುರಡಿ ಮಾತನಾಡಿ, ಶಿಕ್ಷಕ ವೃತ್ತಿ ಸಮಾಜ ನಿರ್ಮಾಣದ ಶ್ರೇಷ್ಠ ಸೇವೆಯಾಗಿದ್ದು, ವಿದ್ಯಾರ್ಥಿಗಳನ್ನು ಸತ್ಪ್ರಜೆಗಳಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
“ನಿವೃತ್ತಿ ಎಂದರೆ ಸೇವೆಯ ಅಂತ್ಯವಲ್ಲ. ಸಮಾಜಕ್ಕೆ ಜ್ಞಾನ ಮತ್ತು ಅನುಭವ ಹಂಚಿಕೊಳ್ಳಲು ದೊರೆಯುವ ಮತ್ತೊಂದು ಅವಕಾಶ.”
ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು



