IND Vs ENG: ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ 7 ವಿಕೆಟ್ ಗಳ ಭರ್ಜರಿ ಜಯ!

0
Spread the love

ಕೋಲ್ಕತ್ತಾದ ಈಡನ್​ ಗಾರ್ಡನ್​​ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್​ ವಿರುದ್ಧ ಟೀಮ್​ ಇಂಡಿಯಾ ಗೆದ್ದು ಬೀಗಿದೆ. ಇಂಗ್ಲೆಂಡ್​ ನೀಡಿದ 132 ರನ್​ಗಳ ಸಾಧಾರಣ ಗುರಿಯನ್ನು ಭಾರತ ತಂಡ ಕೇವಲ 12.5 ಓವರ್​​ನಲ್ಲಿ ತಲುಪಿದೆ. ಈ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Advertisement

ಕೋಲ್ಕತ್ತಾದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಕೇವಲ 132 ರನ್ ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 12.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ಭಾರತದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಅಭಿಷೇಕ್ ಶರ್ಮಾ ತಂಡಕ್ಕೆ ಸುಲಭ ಜಯ ತಂದುಕೊಟ್ಟರು. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಸಾಲ್ಟ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮತ್ತೊಬ್ಬ ಆರಂಭಿಕ ಬೆನ್ ಡಕೆಟ್​ ಕೂಡ 4 ರನ್​ಗಳಿಗೆ ಸುಸ್ತಾದರು. ಬ್ರೂಕ್ ಇನ್ನಿಂಗ್ಸ್ 17 ರನ್​​ಗಳಿಗೆ ಅಂತ್ಯವಾದರೆ, ಆ ನಂತರ ಬಂದ ಲಿವಿಂಗ್ಸ್ಟನ್ ಬಂದಷ್ಟೇ ವೇಗವಾಗಿ ಸೊನ್ನೆಗೆ ಪೆವಿಲಿಯನ್‌ ಸೇರಿಕೊಂಡರು. ಯುವ ಆಟಗಾರ ಬೆಥೆಲ್ ಕೂಡ 7 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು.

ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ನಾಯಕ ಜೋಸ್ ಬಟ್ಲರ್ 44 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 68 ರನ್​ಗಳ ಕಾಣಿಕೆ ನೀಡಿದರು. ಉಳಿದಂತೆ ತಂಡದ ಯಾವ ಬ್ಯಾಟರ್​ಗೂ ಭಾರತದ ಬೌಲರ್​ಗಳ ಮುಂದೆ ನೆಲಕಚ್ಚಿ ಆಡಲು ಸಾಧ್ಯವಾಗಲಿಲ್ಲ. ಇತ್ತ ಭಾರತದ ಪರ ಮಾರಕ ದಾಳಿ ನಡೆಸಿದ ಅರ್ಷದೀಪ್ ಸಿಂಗ್ ಮತ್ತು ವರುಣ್ ಚಕ್ರವರ್ತಿ ಅದ್ಭುತ ಬೌಲಿಂಗ್ ಮಾಡಿದರು. ಅರ್ಷದೀಪ್ ಸಿಂಗ್ 4 ಓವರ್​ಗಳಲ್ಲಿ ಕೇವಲ 17 ರನ್ ನೀಡಿ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 4 ಓವರ್​ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ಕೂಡ ಉತ್ತಮ ಬೌಲಿಂಗ್ ಮಾಡಿ ತಲಾ 2 ವಿಕೆಟ್ ಪಡೆದರು.

ಇಂಗ್ಲೆಂಡ್ ನೀಡಿದ 132 ರನ್​ಗಳ ಕಡಿಮೆ ಮೊತ್ತವನ್ನು ಬೆನ್ನಟ್ಟಿದ ಭಾರತಕ್ಕೆ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಮೊದಲ ವಿಕೆಟ್‌ಗೆ 41 ರನ್‌ಗಳ ಜೊತೆಯಾಟ ನೀಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಆದಾಗ್ಯೂ, ಆರ್ಚರ್ ಮೊದಲು ಸ್ಯಾಮ್ಸನ್ (26) ಮತ್ತು ನಂತರ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿ ಭಾರತದ ಇನ್ನಿಂಗ್ಸ್ ಅನ್ನು ಹಳಿತಪ್ಪಿಸಿದರು. ಆದರೆ ತಮ್ಮ ಸ್ಫೋಟಕ ಬ್ಯಾಟಿಂಗ್ ಮುಂದುವರೆಸಿದ ಅಭಿಷೇಕ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಇಂಗ್ಲೆಂಡ್‌ನ ಪ್ರತಿಯೊಬ್ಬ ಬೌಲರ್‌ನನ್ನು ದಂಡಿಸಿದ ಅಭಿಷೇಕ್ ಇದರೊಂದಿಗೆ ಅಂತರರಾಷ್ಟ್ರೀಯ ಟಿ20ಯಲ್ಲಿ ಅತಿ ವೇಗದ ಅರ್ಧಶತಕ ಗಳಿಸಿದ ಜಂಟಿ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು.


Spread the love

LEAVE A REPLY

Please enter your comment!
Please enter your name here