ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ರೈಲಿನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ, ತಾಂತ್ರಿಕ ದೋಷದಿಂದಾಗಿ ಕೆಲವು ರೈಲುಗಳ ಸಂಚಾರದಲ್ಲಿ ಅಲ್ಪ ಪ್ರಮಾಣದ ವಿಳಂಬ ಉಂಟಾಗುವ ಸಾಧ್ಯತೆ ಇದೆ. ದೋಷವನ್ನು ಶೀಘ್ರದಲ್ಲೇ ಸರಿಪಡಿಸಲು ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿ, ಪ್ರಯಾಣಿಕರ ಸಹಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.
ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾದ ಪರಿಣಾಮ ಕಬ್ಬನ್ ಪಾರ್ಕ್ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನೂರಾರು ಪ್ರಯಾಣಿಕರು ರೈಲಿಗಾಗಿ ಕಾದು ನಿಲ್ಲಬೇಕಾಯಿತು. ನಿಲ್ದಾಣಗಳಲ್ಲಿ ಜನಸಂದಣಿ ಹೆಚ್ಚಾಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.
ಮೆಟ್ರೋ ಪ್ರಯಾಣಿಕರೊಬ್ಬರು ಮಾತನಾಡಿ, “ಮೆಟ್ರೋ ರೈಲು ಸಂಚಾರ ನಿಂತು ಅರ್ಧ ಗಂಟೆಗೂ ಹೆಚ್ಚು ಸಮಯವಾಗಿದೆ. ಕಬ್ಬನ್ ಪಾರ್ಕ್ ನಿಲ್ದಾಣದಲ್ಲೇ ರೈಲು ನಿಂತಿದ್ದು, ತಾಂತ್ರಿಕ ದೋಷವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೇರೆ ವ್ಯವಸ್ಥೆ ಮಾಡಿಕೊಂಡು ಹೋಗುವಂತೆ ಸೂಚಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.



