ಬಂಡೀಪುರ, ನಾಗರಹೊಳೆ ಸಫಾರಿಗೆ ತಾತ್ಕಾಲಿಕ ನಿಷೇಧ: ಸಚಿವ ಈಶ್ವರ ಖಂಡ್ರೆ ಆದೇಶ 

0
Spread the love

ಬೆಂಗಳೂರು: ಬಂಡಿಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ನಿಷೇಧಿಸಿ ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಹೌದು ನಾಗರಹೊಳೆ ಮತ್ತು ಬಂಡೀಪುರದಲ್ಲಿ ಹುಲಿ ದಾಳಿಯಿಂದ ಜೀವ ಹಾನಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ,

Advertisement

ಸಚಿವ ಈಶ್ವರ ಖಂಡ್ರೆ ಅವರು ತಕ್ಷಣದಿಂದಲೇ ಸಫಾರಿ ಮತ್ತು ಚಾರಣವನ್ನು ಸ್ಥಗಿತಗೊಳಿಸಲು ಆದೇಶಿಸಿದ್ದಾರೆ. ಹುಲಿ ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚನೆ ನೀಡಲಾಗಿದ್ದು, ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಕ್ರಮ ಕೈಗೊಳ್ಳಲಾಗಿದೆ.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಹುಲಿ ದಾಳಿಯ ನಂತರ ಅಕ್ಟೋಬರ್ 27ರಂದು ಬಂಡೀಪುರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಹಾಗೂ ಕಳೆದ 2ರಂದು ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಶಾಸಕರುಗಳ ಸಮ್ಮುಖದಲ್ಲಿ ರೈತರು, ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದರು. ಈ ವೇಳೆ ಹುಲಿ ಸೆರೆಗೆ ಎಲ್ಲ ಸಾಧ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ, ಜೊತೆಗೆ ಸಫಾರಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರು. ಇದರ ಬೆನ್ನಲ್ಲೇ ಮತ್ತೊಂದು ದಾಳಿ ನಡೆದಿದೆ ಎಂದು ಅವರು ಬೇಸರ ಹೊರಹಾಕಿದ್ದಾರೆ.

ಈ ಹಿನ್ನೆಲೆ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಆದೇಶಿಸಲಾಗಿದೆ.

ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here