ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದ ಬೆನ್ನಲ್ಲೇ, ಸೋಮವಾರದಿಂದ ಜಾರಿಗೆ ಬರಬೇಕಿದ್ದ ದರ ಪರಿಷ್ಕರಣೆಗೆ ತಾತ್ಕಾಲಿಕವಾಗಿ ಬ್ರೇಕ್ ಬೀಳುವ ಸಾಧ್ಯತೆ ಮೂಡಿದೆ. ಇದರಿಂದ ಲಕ್ಷಾಂತರ ಮೆಟ್ರೋ ಪ್ರಯಾಣಿಕರಿಗೆ ದೊಡ್ಡ ರಿಲೀಫ್ ಸಿಕ್ಕಿದೆ.
ಬಿಎಂಆರ್‌ಸಿಎಲ್ (BMRCL) ಪ್ರಸ್ತಾವಿಸಿದ್ದ ಟಿಕೆಟ್ ದರ ಏರಿಕೆ ವಿರುದ್ಧ ಜನಾಕ್ರೋಶ ಭುಗಿಲೆದಿದ್ದು, ರಾಜಕೀಯ ವಲಯದಲ್ಲಿಯೂ ತೀವ್ರ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸರ್ಕಾರದ ತಕ್ಷಣದ ಹಸ್ತಕ್ಷೇಪವನ್ನು ಕೋರಿದ್ದರು.
ಸೋಮವಾರದಿಂದ ಜಾರಿಗೆ ಬರಬೇಕಿದ್ದ ರಾಜ್ಯ ಸರ್ಕಾರದ ಅನ್ಯಾಯದ ಮೆಟ್ರೋ ಟಿಕೆಟ್ ದರ ಏರಿಕೆ ವಿರುದ್ಧ ನಿನ್ನೆ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದ ತೇಜಸ್ವಿ ಸೂರ್ಯ, ಇಂದು ಕೇಂದ್ರ ಗೃಹ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟ್ಟರ್) ನಲ್ಲಿ ಮಾಹಿತಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ, “ಮೆಟ್ರೋ ದರ ಏರಿಕೆ ಬಗ್ಗೆ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದೇನೆ. ಫೆಬ್ರವರಿ 9ರಿಂದ ಮೆಟ್ರೋ ಟಿಕೆಟ್ ದರ ಹೆಚ್ಚಿಸದಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ” ಎಂದು ತಿಳಿಸಿದ್ದಾರೆ.
“ದೇಶದಲ್ಲೇ ನಮ್ಮ ಮೆಟ್ರೋ ಅತ್ಯಂತ ದುಬಾರಿ ಮೆಟ್ರೋ ಸೇವೆಯಾಗಿದೆ. ದರ ಏರಿಕೆಯಿಂದ ಲಕ್ಷಾಂತರ ಜನರಿಗೆ ಆರ್ಥಿಕ ಹೊರೆ ಬೀಳಲಿದೆ. ಸಾರ್ವಜನಿಕ ಸಾರಿಗೆ ಇನ್ನಷ್ಟು ಅಲಭ್ಯವಾಗುತ್ತದೆ. ಹೀಗಾಗಿ ದರ ಪರಿಷ್ಕರಣೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ಸೂಚಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ” ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.



