ಕೊಪ್ಪಳ: ಅಮೆರಿಕ ಮತ್ತು ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಘಟನೆ ಜಾಗತಿಕ ಮಟ್ಟದಲ್ಲಿ ತೀವ್ರ ಪ್ರತಿಕ್ರಿಯೆ ಹುಟ್ಟಿಸಿದೆ. ದೇಶದ ಹಲವೆಡೆ ಪ್ರತಿಭಟನೆಗಳು ನಡೆದಿರುವ ನಡುವೆ, ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಸಾಮಾಜಿಕ ಜಾಲತಾಣದ ಪೋಸ್ಟ್ ವಿಚಾರವಾಗಿ ಹಲ್ಲೆ ಆರೋಪ ಕೇಳಿಬಂದಿದೆ.
ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತಾಗಿ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದ ಚಂದ್ರಶೇಖರ ಎಂಬ ಯುವಕನ ಮೇಲೆ ಐದಾರು ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಾಗಿದೆ. ಚಂದ್ರಶೇಖರ ಖರ್ಜೂರ ವ್ಯಾಪಾರಿಯಾಗಿದ್ದು, ವ್ಯಾಪಾರ ಮಾಡುತ್ತಿದ್ದ ವೇಳೆ ಏಕಾಏಕಿ ಬಂದ ಯುವಕರು “ನಮ್ಮ ಸಮಾಜದ ಬಗ್ಗೆ ಏಕೆ ಸ್ಟೋರಿ ಹಾಕಿದೆ” ಎಂದು ಪ್ರಶ್ನಿಸಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮನೆಗೆ ನುಗ್ಗಿ ಹೊಡೆಯುವ ಬೆದರಿಕೆ ಹಾಕಿದರೆಂಬ ಆರೋಪವೂ ಕೇಳಿಬಂದಿದ್ದು, ಭಯಗೊಂಡ ಚಂದ್ರಶೇಖರ ತಡರಾತ್ರಿ ಗಂಗಾವತಿ ನಗರ ಪೊಲೀಸ್ ಠಾಣೆಗೆ ತೆರಳಿ ಜೀವ ಭಯವಿದೆ ಎಂದು ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇದಕ್ಕೂ ಮುನ್ನ ಖಮೇನಿ ಹತ್ಯೆ ಖಂಡಿಸಿ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು.



