ಕಾರವಾರ: ಕಾರು ಮತ್ತು ಸರ್ಕಾರಿ ಬಸ್ಸಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ನಡೆದಿದೆ. ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ಸು ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು,
ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ವ್ಯಕ್ತಿಗಳು ಮಂಗಳೂರು ಸಮೀಪದವರು ಎನ್ನಲಾಗಿದ್ದು, ಗಂಭೀರ ಗಾಯಗೊಂಡ ವ್ಯಕ್ತಿ ತಮಿಳುನಾಡಿನ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿ 60ಕ್ಕೂ ಅಧಿಕ ಪ್ರಯಾಣಿಕರಿದ್ದು ಕೆಲವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.