ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ.
ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆ ನಿವಾಸಿಗಳಾದ ಸಿದ್ದಾರ್ಥ (27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಸೌಂದರ್ಯ (26), ಸಿಂಧು (24) ಹಾಗೂ ಒಂದು ವರ್ಷದ ಮಗು ಕಶ್ವಶ್ರೀ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ರಾಣೇಬೆನ್ನೂರಿನಿಂದ ದಾವಣಗೆರೆ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಚಳಗೇರಿ ಟೋಲ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



