ಚಾಮರಾಜನಗರ: ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ಟೆಂಪೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಹರಳೆ ಗ್ರಾಮದ ಬಳಿ ನಡೆದಿದೆ.
ಮೃತ ಬಾಲಕನನ್ನು ಯಶವಂತ್ (11) ಎಂದು ಗುರುತಿಸಲಾಗಿದೆ. ಬಾಲಕ ಸೈಕಲ್ ಹೊಡೆಯುತ್ತಿದ್ದ ವೇಳೆ ಯಮಸ್ವರೂಪಿಯಾಗಿ ಬಂದ ಟೆಂಪೋ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬಾಲಕ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಅಜ್ಜಿ ಮನೆಗೆ ಬಂದಿದ್ದನು. ಕುಟುಂಬಸ್ಥರು ಇತ್ತೀಚೆಗಷ್ಟೇ ಅವನಿಗೆ ಸೈಕಲ್ ಕೊಡಿಸಿದ್ದರು ಎಂದು ತಿಳಿದುಬಂದಿದೆ.
ಘಟನೆ ಬಗ್ಗೆ ಮಾಹಿತಿ ದೊರೆತ ಕೂಡಲೇ ಕೊಳ್ಳೇಗಾಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟೆಂಪೋವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



