ಬೆಂಗಳೂರು: ನಗರದ ಎಂಜಿ ರಸ್ತೆ ವ್ಯಾಪ್ತಿಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಇಂದು ಮುಂಜಾನೆ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮುಂಜಾನೆ ಸುಮಾರು 4.30ರ ವೇಳೆಗೆ ಪಾದಚಾರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ಅಪಘಾತದ ತೀವ್ರತೆಗೆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಮೃತರ ಗುರುತು ಪತ್ತೆಹಚ್ಚುವ ಕಾರ್ಯವೂ ಮುಂದುವರಿದಿದೆ.
ಈ ಸಂಬಂಧ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದ ವಾಹನ ಹಾಗೂ ಚಾಲಕನ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



