ತುಮಕೂರು:- ತುಮಕೂರು ತಾಲೂಕಿನ ನೆಲಹಾಳ್ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.
ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎಂದು ಹೇಳಲಾಗಿದ್ದು, ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಗೋಕರ್ಣ, ಮುರುಡೇಶ್ವರ ಹಾಗೂ ಉಡುಪಿ ಕಡೆ ಪ್ರವಾಸಕ್ಕೆ ತೆರಳಿದ್ದು, ಪ್ರವಾಸ ಮುಗಿಸಿ ಇಂದು ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆವಿ ಹಾಗೂ ಕೋರಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



