ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿಗೆ ಪ್ರಸಿದ್ಧ ಜಯಶ್ರೀ ಗಾರ್ಮೆಂಟ್ಸ್ ಬಟ್ಟೆ ಅಂಗಡಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ.
ಚಿಕ್ಕೋಡಿ ಪೇಟೆಯಲ್ಲಿರುವ ಜಯಶ್ರೀ ಗಾರ್ಮೆಂಟ್ಸ್‌ನಲ್ಲಿ ರಾತ್ರಿ ವೇಳೆ ಏಕಾಏಕಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಇದರಿಂದ ಬೆಂಕಿ ಕಾಣಿಸಿಕೊಂಡಿದೆ. ಜವಳಿ ಅಂಗಡಿಯಾಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲೇ ಇಡೀ ಅಂಗಡಿಗೆ ವ್ಯಾಪಿಸಿದ್ದು, ಕಟ್ಟಡ ದಟ್ಟ ಹೊಗೆಯಿಂದ ಆವರಿಸಿತ್ತು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಬೆಂಕಿಯ ತೀವ್ರತೆ ಹೆಚ್ಚಿದ್ದ ಕಾರಣ ಮೂರು ಅಗ್ನಿಶಾಮಕ ವಾಹನಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಯಿತು.
ಸಾರ್ವಜನಿಕರ ಸಹಕಾರದೊಂದಿಗೆ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದರು. ಆದರೆ ಬೆಂಕಿಗೆ ಅಂಗಡಿಯಲ್ಲಿದ್ದ ಬಟ್ಟೆಗಳು ಹಾಗೂ ಇತರೆ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಹಾಗೂ ನಷ್ಟದ ಪ್ರಮಾಣದ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.



