ನವದೆಹಲಿ: ಒಬಿಸಿ ಮೀಸಲಾತಿಯನ್ನು ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ನೀಡಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಸಂವಿಧಾನ ದಿನದ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಇಂತಹ ಕಾರ್ಯಸೂಚಿ ಅತ್ಯಂತ ಭಯಾನಕವಾಗಿದೆ ಎಂದು ಟೀಕಿಸಿದ್ದಾರೆ.
ಸಂವಿಧಾನ ದಿನದ ಹಿನ್ನೆಲೆಯಲ್ಲಿ ಸಂವಿಧಾನದ ಪ್ರತಿಗೆ ನಮನ ಸಲ್ಲಿಸುತ್ತಿರುವ ಫೋಟೊವನ್ನು ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 1949ರ ನವೆಂಬರ್ 26ರಂದು ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ದಿನವನ್ನು ಸ್ಮರಿಸಿದ ಅವರು, ಸಂವಿಧಾನ ರಚನಕಾರರು ತಿರಸ್ಕರಿಸಿದ್ದ ಕಾರ್ಯಸೂಚಿಯನ್ನು ವಿರೋಧ ಪಕ್ಷಗಳು ಮತ್ತೆ ಮುಂದಿಡುತ್ತಿವೆ ಎಂದು ಆರೋಪಿಸಿದ್ದಾರೆ.
ವಿರೋಧ ಪಕ್ಷದ ಪ್ರಮುಖ ಪಕ್ಷವು ಒಬಿಸಿ ಮೀಸಲಾತಿಯನ್ನು ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಬಯಸುತ್ತಿರುವುದು ಅತ್ಯಂತ ಆತಂಕಕಾರಿ ವಿಚಾರವಾಗಿದೆ. ಸಂವಿಧಾನ ರಚನಕಾರರು ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಇಂತಹ ಕ್ರಮವನ್ನು ಸಂಪೂರ್ಣವಾಗಿ ವಿರೋಧಿಸಿದ್ದರು ಎಂದು ಮೋದಿ ತಮ್ಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಇದೇ ವೇಳೆ, ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಅಡಚಣೆ ಸೃಷ್ಟಿಸುತ್ತಿವೆ ಎಂದು ಟೀಕಿಸಿರುವ ಪ್ರಧಾನಿ, ಅವು ವಿರೋಧ ಪಕ್ಷಗಳಿಗಿಂತ ‘ಅವ್ರೋಧ ಪಕ್ಷಗಳಾಗಿ’ ವರ್ತಿಸುತ್ತಿವೆ ಎಂದು ವ್ಯಂಗ್ಯವಾಡಿದ್ದಾರೆ. ಪ್ರಜಾಪ್ರಭುತ್ವದ ಪ್ರಕ್ರಿಯೆಗಳಿಗೆ ಅಡ್ಡಿಪಡಿಸುವುದು ಸಾಂವಿಧಾನಿಕ ಜವಾಬ್ದಾರಿಗಳನ್ನು ನಿರ್ವಹಿಸುವುದಕ್ಕೆ ಪರ್ಯಾಯವಲ್ಲ ಎಂದು ಹೇಳಿದ್ದಾರೆ.
ಈ ವರ್ಷದ ಆರಂಭದಲ್ಲಿ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಸಂಬಂಧಿತ ಮಸೂದೆ ಸೋತ ವಿಚಾರವನ್ನೂ ಉಲ್ಲೇಖಿಸಿದ ಮೋದಿ, ಅದೇ ವಿರೋಧ ಪಕ್ಷಗಳು ಮಸೂದೆ ಅಂಗೀಕಾರಕ್ಕೆ ಅವಕಾಶ ನೀಡದೆ ಸಾಂವಿಧಾನಿಕ ಮೌಲ್ಯಗಳ ಬಗ್ಗೆ ತಿರಸ್ಕಾರ ತೋರಿಸಿವೆ ಎಂದು ಆರೋಪಿಸಿದ್ದಾರೆ.
ದೇಶದ ಮಹಿಳೆಯರಿಗೆ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಒದಗಿಸುವ ಪ್ರಯತ್ನವನ್ನು ಯಾವುದೇ ಶಕ್ತಿಯೂ ತಡೆಯಲು ಸಾಧ್ಯವಿಲ್ಲ. ಭಾರತದ ನಾರಿ ಶಕ್ತಿಗೆ ಈ ಭರವಸೆ ನೀಡುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.







