ವಿಜಯಸಾಕ್ಷಿ ಸುದ್ದಿ, ಗದಗ: ರೈತರು ಬೆಳೆಯುವ ಎಲ್ಲ ಉತ್ಪನ್ನಗಳಿಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಕರ್ನಾಟಕ ರೈತ ಸೇನೆಯ ರೋಣ ತಾಲೂಕು ಘಟಕದ ಉಪಾಧ್ಯಕ್ಷ ಶಿವಲಿಂಗಪ್ಪ ಹೂಗಾರ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಬೆಳೆಗಳಿಗೆ ಸೂಕ್ತ ಬೆಲೆ ಕಲ್ಪಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯೂ ಹೌದು. ಎಂ.ಎಸ್. ಸ್ವಾಮಿನಾಥನ್ ಆಯೋಗವು ಕೃಷಿ ವ್ಯವಸ್ಥೆಯನ್ನು ಸುಧಾರಿಸಲು ಕೆಲವೊಂದು ಶಿಫಾರಸು ಮಾಡಿದ್ದು, ಅದನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಲಿಲ್ಲ. ಕಾಂಗ್ರೆಸ್ ಮಾಡದ ಅಭಿವೃದ್ಧಿ ಕೆಲಸಗಳನ್ನು ಬಿಜೆಪಿ ಮಾಡುತ್ತದೆ ಎಂಬ ಕಾರಣಕ್ಕೆ ದೇಶದ ಜನರು ಕೇಂದ್ರದಲ್ಲಿ ಬಿಜೆಪಿಗೆ ಅಧಿಕಾರ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಎಂಎಸ್‌ಪಿ ಜಾರಿಗೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಯೊಂದು ವಸ್ತುವಿಗೂ ಎಂಆರ್‌ಪಿ ನಿಗದಿಯಾಗಿರುತ್ತದೆ. ಆದರೆ, ರೈತರ ಉತ್ಪನ್ನಗಳಿಗೆ ಯಾಕಿಲ್ಲ? ರಾಜ್ಯದಿಂದ ಸಂಸತ್ ಆಯ್ಕೆಯಾಗಿರುವ ಯಾವೊಬ್ಬ ಸಂಸದ ಕೂಡ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ದೊರಕಿಸಿಕೊಡುವ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಮಹದಾಯಿ ವಿಚಾರದಲ್ಲೂ ಕೇಂದ್ರ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ. ಬೊಮ್ಮಾಯಿ ಅವರು ಕಳಸಾ-ಬಂಡೂರಿ ಹೆಸರು ಹೇಳಿಕೊಂಡು ಸಚಿವ, ಸಿಎಂ, ಸಂಸದರಾದರೇ ಹೊರತು ಯೋಜನೆ ಅನುಷ್ಠಾನಕ್ಕೆ ಶ್ರಮಿಸಲಿಲ್ಲ ಎಂದು ದೂರಿದರು.
ಕಾಂಗ್ರೆಸ್ ನಾಯಕರು ಈಗಲಾದರೂ ರೈತರ ಸಮಸ್ಯೆಗಳ ಬಗ್ಗೆ ಗಮನಹರಿಸಿ, ಸಂಸತ್‌ನಲ್ಲಿ ಧ್ವನಿ ಎತ್ತಬೇಕು. ಬೆಳೆವಿಮೆ ಖಾಸಗಿ ಕಂಪನಿಯವರಿಗೆ ಕೊಡುವ ಬದಲು ಸರ್ಕಾರಿ ಸ್ವಾಮ್ಯದ ಕಂಪನಿಗೆ ಕೊಡಬೇಕು ಎಂದು ಆಗ್ರಹಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಬೆಳೆಯುವ ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು. ರೈತರ ಕೂಗು ಕೇಳಿಸಿಕೊಳ್ಳದಿದ್ದರೆ ಉಗ್ರ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಮಂಜುನಾಥ ಮಾಳವಾಡ, ರಮೇಶ ಚಲವಾದಿ, ಪಿಂಜಾರ, ಮಲ್ಲಪ್ಪ ಇದ್ದರು.
ಮೋದಿ ಸರ್ಕಾರ 20 ಕೋಟಿ ಉದ್ಯೋಗ ಸೃಷ್ಟಿಸಿದ್ದರೆ ರೈತರು, ಮಧ್ಯಮ ವರ್ಗದವರು ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರಲಿಲ್ಲ. ಬಿಜೆಪಿಯವರು 14 ಮುಡಾ ಸೈಟ್ ವಿಚಾರವಾಗಿ ಪಾದಯಾತ್ರೆ ಮಾಡಿದರು. ಆದರೆ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭೂಮಿ ಒತ್ತುವರಿ ಮಾಡಿದ್ದು ಅವರ ಕಣ್ಣಿಗೆ ಕಾಣಿಸುತ್ತಿಲ್ಲವೇ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.