ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಮತ್ತು ಅನಧಿಕೃತ ವೈದ್ಯಕೀಯ ವೃತ್ತಿಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಖಡಕ್ ಕ್ರಮಕ್ಕೆ ಮುಂದಾಗಿದೆ. ಜನರ ಆರೋಗ್ಯದೊಂದಿಗೆ ಚೆಲ್ಲಾಟ ನಡೆಸುವ ನಕಲಿ ವೈದ್ಯರು, ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಗಳು ಹಾಗೂ ಆರೋಗ್ಯ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ‘ಜಿಲ್ಲಾ ಮಟ್ಟದ ವಿಶೇಷ ಪಡೆ’ಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅನಧಿಕೃತ ವೈದ್ಯಕೀಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ಈಗಾಗಲೇ ವಿಶೇಷ ತಪಾಸಣೆ ವೇಳೆ ಪತ್ತೆಯಾದ ಮೂವರು ನಕಲಿ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿ, ತಲಾ 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ದಂಡದ ಮೊತ್ತವನ್ನು ಸರ್ಕಾರದ ಖಜಾನೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೆಪಿಎಂಇ (KPME) ಕಾಯ್ದೆಯಡಿ ನೋಂದಣಿ ಮಾಡಿಸದೇ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳು, ಪ್ರಯೋಗಾಲಯಗಳು, ಸ್ಕ್ಯಾನಿಂಗ್ ಕೇಂದ್ರಗಳು, ರಕ್ತ ಬ್ಯಾಂಕ್ಗಳು ಹಾಗೂ ಇತರೆ ಆರೋಗ್ಯ ಸಂಸ್ಥೆಗಳು 15 ದಿನಗಳೊಳಗೆ ಕಡ್ಡಾಯವಾಗಿ ಆನ್ಲೈನ್ ಮೂಲಕ ನೋಂದಣಿಗೆ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದರು. ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಾಯ್ದೆಯಡಿ ಕಠಿಣ ಕ್ರಮ ಹಾಗೂ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದಲ್ಲದೆ, ನೋಂದಾಯಿತ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳು ತಮ್ಮ ಸಂಸ್ಥೆಗಳ ನೋಂದಣಿ ಅವಧಿ ಮುಕ್ತಾಯಗೊಳ್ಳುವ ಮೂರು ತಿಂಗಳ ಮುಂಚೆಯೇ ಅಗತ್ಯ ದಾಖಲೆಗಳೊಂದಿಗೆ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದರು.
ಸರ್ಕಾರಿ ಆಸ್ಪತ್ರೆಗಳ 200 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳು ಕಾರ್ಯನಿರ್ವಹಿಸುವಂತಿಲ್ಲ. ಈ ನಿಯಮ ಉಲ್ಲಂಘಿಸಿದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ಆರೋಗ್ಯ ಸೇವೆಯ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ಧ ಜಿಲ್ಲಾಡಳಿತ ಸಮರ ಸಾರಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ವಿಶೇಷ ಪಡೆಯ ರಚನೆಯೊಂದಿಗೆ ನಕಲಿ ವೈದ್ಯರ ಜಾಲಕ್ಕೆ ಕಡಿವಾಣ ಬೀಳುವ ನಿರೀಕ್ಷೆ ಮೂಡಿದೆ.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಕೆಪಿಎಂಇ ನೋಡಲ್ ಅಧಿಕಾರಿ ಡಾ. ಹೆಚ್.ಎಲ್. ಗಿರಡ್ಡಿ, ಐಎಂಎ ಅಧ್ಯಕ್ಷ ಡಾ. ಶ್ರೀಧರ್ ಕುರಡಗಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಜುಬೇದ ತಿಗಳೆರ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಪ್ರೀತ್ ಖೋನಾ, ಡಾ. ಬಿ.ಎಸ್. ಭಜಂತ್ರಿ, ಡಾ. ಸುಭಾಷಚಂದ್ರ ದಾಯಗೊಂಡ, ಡಾ. ಸಂತೋಷಗೌಡ ಪಾಟೀಲ, ಡಾ. ಆರ್.ಸಿ. ಕೊರವನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಜನರ ಜೀವದೊಂದಿಗೆ ಚೆಲ್ಲಾಟ ನಡೆಸುವ ನಕಲಿ ವೈದ್ಯರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಅನಧಿಕೃತ ವೈದ್ಯಕೀಯ ವೃತ್ತಿ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.”
– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ



