ಬೆಂಗಳೂರು:- ಕಳೆದ 19 ತಿಂಗಳಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸಿಲ್ಲ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ಕರ್ನಾಟಕ ವಿಧಾನಮಂಡಲ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದೆ. ವಿಧಾನಸಭೆ ಮತ್ತು ಪರಿಷತ್ ಸದಸ್ಯರನ್ನು ಒಳಗೊಂಡ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಭಾಷಣ ಮಾಡಿದರು.
ಕಳೆದ 19 ತಿಂಗಳಲ್ಲಿ ಗಂಭೀರವಾದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳೇನು ಉದ್ಭವಿಸಿಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಕೆಲಸ ಮಾಡುತ್ತಿವೆ ಎಂದು ಶ್ಲಾಘಿಸಿದರು. ಸರ್ಕಾರ ಬಂದಾಗಿನಿಂದ ಗ್ಯಾರಂಟಿ ಯೋಜನೆಗಳಿಗೆ 70,000 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವರ್ಷಕ್ಕೆ 90,000 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದೆ. ಸರ್ಕಾರ ಅಭಿವೃದ್ಧಿ ವೇಗ ಸದೃಢಗೊಳಿಸಿದೆ. ಆಡಳಿತ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶವಾಗಿ ಬಳಕೆಗೆ ಬದ್ಧವಾಗಿದೆ ಎಂದು ವಿವರಿಸಿದರು.
ಕಳೆದ ಬಜೆಟ್‌ನಲ್ಲಿ ಮಾಡಿದ್ದ 334 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಆಗಿದೆ. ಸಾಮಾಜಿಕ ಪಿಂಚಣಿ ಯೋಜನೆ ಸೇರಿ ನೇರ ನಗದು – ಸಬ್ಸಿಡಿ ಪ್ರೋತ್ಸಾಹದಿಂದ 1.25 ಕೋಟಿಗೂ ಹೆಚ್ಚು ಕುಟುಂಬಗಳಿಗೆ ಅನುಕೂಲ ಆಗಿದೆ. 13 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದೆ. ಉನ್ನತ ಶಿಕ್ಷಣದಲ್ಲಿ 1,088 ಸಹಾಯಕ ಪ್ರಾಧ್ಯಾಪಕರ ನೇಮಕ ಮಾಡಲಾಗಿದೆ. 8,311 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸರ್ಕಾರದ ಸಾಧನೆಗಳನ್ನ ವಿವರಿಸಿದರು.
ವಿವೇಕ ಯೋಜನೆ ಅಡಿ ಮತ್ತು ವಿಶೇಷ ಯೋಜನೆ ಅಡಿ 5,349 ಶಾಲಾ ಕೊಠಡಿಗಳು ಪೂರ್ಣಗೊಂಡಿವೆ. 784 ಕೊಠಡಿಗಳ ಕಾಮಗಾರಿ ಪ್ರಗತಿಯಲ್ಲಿವೆ. 522 ಕೆಪಿಎಸ್ ಶಾಲೆಗಳ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. 1,953 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ ಪ್ರಾರಂಭ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಸಮಸ್ಯೆ ಇಲ್ಲ ಎಂದು ಭಾಷಣದಲ್ಲಿ ಪ್ರಸ್ತಾಪಿಸಿದರು.