ಬೆಂಗಳೂರು: ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು? ತಂದೆ-ತಾಯಿ, ಪೋಷಕರೇ ಸಮಾಧಾನ ಮಾಡಬೇಕು. ಅದೇ ರೀತಿ ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೂ ಹೈಕಮಾಂಡ್ ಗಮನಿಸುತ್ತದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, ಪತ್ರದ ಕುರಿತು ಅವರನ್ನೇ ಕೇಳಬೇಕು. ಪಕ್ಷದ ವರಿಷ್ಠರನ್ನು ಭೇಟಿ ಮಾಡುವುದು ಅವರವರ ಹಕ್ಕು. ಅವರ ಪ್ರತಿಪಾದನೆ, ಅವರ ವಿಚಾರ. ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.
ನಮ್ಮ ಪಕ್ಷದಲ್ಲಿ ಮಾತನಾಡಲು ಎಲ್ಲರಿಗೂ ಸ್ವಾತಂತ್ರ್ಯ ಇದೆ. ಯಾವುದೇ ಸಮಸ್ಯೆಗಳಿದ್ದರೂ ಹೈಕಮಾಂಡ್ ಅವನ್ನು ಗಮನಿಸುತ್ತಿರುತ್ತದೆ. ಹಾಗಾಗಿಯೇ ಅವರು ಆ ಮಾತನ್ನು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ಕುರಿತು ಪ್ರತಿಕ್ರಿಯಿಸಿದ ಅವರು, ಡಿ.ಕೆ. ಶಿವಕುಮಾರ್ ಸಾಮಾನ್ಯವಾಗಿ ದೆಹಲಿಗೆ ಹೋಗುತ್ತಾರೆ. ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡುತ್ತಾರೆ. ಜೊತೆಗೆ ಸಚಿವ ಪ್ರಿಯಾಂಕ್ ಅವರು ದೆಹಲಿಯಲ್ಲಿ ಸಭೆ ಕರೆದಿದ್ದು, ಆ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಅಧಿಕಾರ ಹಂಚಿಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿ ಮಾತನಾಡಿದ ಡಿ.ಕೆ. ಸುರೇಶ್, ಹೈಕಮಾಂಡ್ ಹೇಳಿದಂತೆ ನಡೆಯುತ್ತದೆ. ಖರ್ಗೆಯವರ ಹೇಳಿಕೆ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಆದರೆ ಹೈಕಮಾಂಡ್ ತೀರ್ಮಾನವೇ ಅಂತಿಮ. ಎಐಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಹೇಳಿದಂತೆ ನಾವು ನಡೆಯುತ್ತೇವೆ ಎಂದು ಹೇಳಿದರು.



