ಬೆಂಗಳೂರು:- ಸಮೀಕ್ಷೆ ಒಂದು ಗೊಂದಲದ ಗೂಡು, ಇದು ಹಿಂದುತ್ವ ವಿರೋಧ ನೀತಿ ಹೊಂದಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇನ್ನೂ 15 ಜಾತಿಗಳಿಗೆ ಕ್ರೈಸ್ತ ಟ್ಯಾಗ್ ನೀಡಿರುವುದನ್ನು ರದ್ದು ಮಾಡಬೇಕೆಂದು ಬಿಜೆಪಿ ನಿಯೋಗ ಒತ್ತಾಯಿಸಿತು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಸೋಮವಾರ ಪ್ರಾರಂಭವಾಗಿದೆ. ಈ ಸಮೀಕ್ಷೆ ಒಂದು ಗೊಂದಲದ ಗೂಡು. ಇದು ಹಿಂದುತ್ವ ವಿರೋಧ ನೀತಿ ಎಂದು ಕಿಡಿಕಾರಿದ್ದಾರೆ. ಗೊಂದಲ ಪರಿಹರಿಸಲು ಕೋರಿ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದೇವೆ. ಬ್ರಾಹ್ಮಣ ಕ್ರೈಸ್ತರು, ಲಿಂಗಾಯತ ಕ್ರೈಸ್ತರು, ಒಕ್ಕಲಿಗ, ವೀರಶೈವ ಮೊದಲಾದ ಎಲ್ಲರನ್ನೂ ಕ್ರೈಸ್ತ ಎಂದು ಹೆಸರಿಸಿದ್ದಾರೆ. ಹೊಲೆಯ, ಮಾದಿಗ, ಬಂಜಾರ ಕ್ರೈಸ್ತ, ಬೋವಿ ಕ್ರೈಸ್ತ ಎಲ್ಲವನ್ನೂ ಸೇರಿಸಿದ್ದರು ಎಂದಿದ್ದಾರೆ.
ಹೋರಾಟಗಳು ನಡೆದು ಪ್ರಭಾವಿ ಸಮುದಾಯಗಳು ಹೋರಾಟಕ್ಕೆ ಇಳಿದಾಗ ಅವುಗಳನ್ನು ಕಾಣದಂತೆ ಹೈಡ್ ಮಾಡಿದ್ದಾಗಿ ಹೇಳಿದ್ದರು. ಆದರೆ, ಪರಿಶಿಷ್ಟ ವರ್ಗಗಳಿಗೆ ಸೇರಿದ್ದನ್ನು ಹೈಡ್ ಮಾಡಿಲ್ಲ. ಇದರಿಂದ ಗೊಂದಲವಾಗಿದೆ. ಎಲ್ಲಾ ಜಾತಿಗಳಿಂದ ಕ್ರೈಸ್ತ ಕಾಲಂಗಳನ್ನು ಸಂಪೂರ್ಣವಾಗಿ ಕೈಬಿಟ್ಟಿಲ್ಲ ಎಂದು ದೂರಿದ್ದಾರೆ. ದಲಿತರು ಕ್ರೈಸ್ತರಾಗಿ ಸೇರಿದರೆ ಅವರನ್ನು ದಲಿತರೆಂದು ಪರಿಗಣಿಸಲಾಗುವುದಿಲ್ಲ. ಇಲ್ಲಿ ಗೊಂದಲವಿದೆ. ಮತಾಂತರ ಆದವರ ಜಾತಿ ನೋಡದಿರಿ. ಇದೇರೀತಿ ಮುಂದುವರೆಸಿ ಮನೆಗಳಿಗೆ ಬರುವುದಾದರೆ, ನೀವು ಒಂದೇ ಒಂದು ಬರಹವನ್ನೂ ಬರೆದುಕೊಳ್ಳಲು ಸಾಧ್ಯವಿಲ್ಲ. ನಮ್ಮ ಜನರು ಬಿಡುವುದಿಲ್ಲ ಎಂದಿದ್ದಾರೆ.


