ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಕರ್ನಾಟಕ ಕಾಂಗ್ರೆಸ್ ಪಕ್ಷ ಒಗ್ಗಟ್ಟೇ ನಮ್ಮ ಶಕ್ತಿ’ ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿದೆ.
ಸಿಎಂ ವಿದಾಯದ ಬ್ರೇಕ್ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರಸ್ಪರ ಅಪ್ಪಿಕೊಂಡಿರುವುದು ಮತ್ತು ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿರುವ ಫೋಟೋಗಳನ್ನು ಕರ್ನಾಟಕ ಕಾಂಗ್ರೆಸ್ ತನ್ನ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದೆ.
ಫೋಟೋಗಳೊಂದಿಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ. ಸಾರ್ವಜನಿಕರ ಸೇವೆಯೇ ನಮ್ಮ ಗುರಿ ಎಂದು ಉಲ್ಲೇಖಿಸಿದೆ.
ಇದರ ನಡುವೆ, ವಿದಾಯದ ಉಪಹಾರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುದನ್ನು ಪಾಲಿಸುವುದು ನನ್ನ ಕರ್ತವ್ಯ ಎಂದು ತಿಳಿಸಿದ್ದಾರೆ. ಈ ಹಿಂದೆ ನಡೆದಿದ್ದ ಒಪ್ಪಂದದ ಸೂತ್ರವನ್ನು ಸಹ ಸಿದ್ದರಾಮಯ್ಯ ಸಭೆಯಲ್ಲಿ ಬಹಿರಂಗಪಡಿಸಿದ್ದು, ಸಂಪುಟದ ಸಹೋದ್ಯೋಗಿಗಳ ಎದುರೇ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ ಎಂದು ತಿಳಿದುಬಂದಿದೆ.



