ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಹೈಸೆಕ್ಯೂರಿಟಿ ಬ್ಯಾರಕ್‌ನಲ್ಲಿ ಪತ್ತೆಯಾದ ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೋಗಳಿವೆ ಎಂಬ ವರದಿಯನ್ನು ಪೊಲೀಸರು ಅಲ್ಲಗಳೆದಿದ್ದಾರೆ.
ಪೆನ್‌ಡ್ರೈವ್‌ನಲ್ಲಿ ಯಾವುದೇ ವಿಡಿಯೋಗಳು ಇಲ್ಲ ಎಂದು ಎಲೆಕ್ಟ್ರಾನಿಕ್ಸ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ ಸ್ಪಷ್ಟಪಡಿಸಿದ್ದಾರೆ.
ಆಗಸ್ಟ್ 11ರಂದು ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿದ ವೇಳೆ ಹೈಸೆಕ್ಯೂರಿಟಿ ಸೆಲ್‌ನಿಂದ ರೆಡ್ಮಿ ಮೊಬೈಲ್, ಚಾರ್ಜರ್, ಸಿಮ್ ಕಾರ್ಡ್, ಪೆನ್‌ಡ್ರೈವ್ ಹಾಗೂ ಡೈರಿ ಸೇರಿದಂತೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಸಿಪಿ ಎಂ. ನಾರಾಯಣ ಅವರ ಪ್ರಕಾರ, ಜಪ್ತಿ ಮಾಡಿದ ಎಲ್ಲಾ ವಸ್ತುಗಳನ್ನು ಸೀಜ್ ಮಾಡಿ ಸೀಲ್ ಹಾಕಿ ತನಿಖಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಪತ್ತೆಯಾದ ಮೊಬೈಲ್‌ನ ಪಾಸ್‌ವರ್ಡ್ ಇನ್ನೂ ಲಭ್ಯವಾಗಿಲ್ಲ. ಫೋನ್ ಯಾರ ಬಳಕೆಯಲ್ಲಿತ್ತು ಹಾಗೂ ಜೈಲಿನೊಳಗೆ ಹೇಗೆ ತಲುಪಿತು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಜಪ್ತಿ ಮಾಡಿದ ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದ್ದು, ತಾಂತ್ರಿಕ ಸಾಕ್ಷ್ಯಗಳು ಬಂದ ಬಳಿಕ ಪ್ರಜ್ವಲ್ ರೇವಣ್ಣ ಹಾಗೂ ಮತ್ತೋರ್ವ ಆರೋಪಿ ಪ್ರತಾಪ್ ರೈ ಅವರನ್ನು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಜೈಲಿನಲ್ಲಿ ಜಾಮರ್ ಅಳವಡಿಸಿದ್ದರೂ 2G ಹಾಗೂ 3G ನೆಟ್‌ವರ್ಕ್ ಸಿಗುತ್ತಿರುವ ಮಾಹಿತಿ ಬೆಳಕಿಗೆ ಬಂದಿದ್ದು, ಈ ಕುರಿತು ರೆಡ್ಮಿ ಕಂಪನಿಗೂ ಪತ್ರ ಬರೆಯಲು ಪೊಲೀಸರು ನಿರ್ಧರಿಸಿದ್ದಾರೆ. ಈ ಹಿಂದೆ ಜೈಲಿನಲ್ಲಿ ಪತ್ತೆಯಾದ ಸಿಮ್ ಕಾರ್ಡ್‌ಗಳೂ ನಕಲಿ ಗುರುತಿನ ದಾಖಲೆಗಳ ಮೂಲಕ ಪಡೆದಿರುವುದು ತನಿಖೆಯಲ್ಲಿ ಗೊತ್ತಾಗಿದೆ.
ಇದೇ ವೇಳೆ ಜೈಲು ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಜಿನೇಂದ್ರ ಖನಗಾವಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದಾರೆ.



