ವಿಜಯಸಾಕ್ಷಿ ಸುದ್ದಿ, ಧಾರವಾಡ: ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಎಂಬ ಅಂಗಗಳು ಸಂವಿಧಾನದಲ್ಲಿವೆ. ಪ್ರಜಾಪ್ರಭುತ್ವದ 4ನೇ ಅಂಗವೆಂದು ಮಾಧ್ಯಮವನ್ನು ಗುರುತಿಸಲಾಗಿದೆ. ಅಧಿಕೃತ ಪತ್ರಕರ್ತರನ್ನು ಗುರುತಿಸಿ, ಗೌರವಿಸಲು ಸಹಾಯವಾಗುವುದಕ್ಕಾಗಿ ನಕಲಿ, ವಸೂಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಸರ್ಕಾರಿ ನೌಕರರಲ್ಲಿ ಮಾಧ್ಯಮಗಳ ಮತ್ತು ಮಾಧ್ಯಮ ಪ್ರತಿನಿಧಿಗಳ ಬಗ್ಗೆ ತಿಳುವಳಿಕೆ ಮೂಡಿಸಲು ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸರ್ಕಾರಿ ನೌಕರರಿಗೆ ಮಾಧ್ಯಮ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಧಾರವಾಡ ಜಿಲ್ಲಾ ಘಟಕದ 2025-28ನೇ ಅವಧಿಯ ನೂತನ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿಣಿ ಸದಸ್ಯರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದರು.
ಸರ್ಕಾರದ ವಿವಿಧ ಇಲಾಖೆಗಳಿಗೆ ಮಾಧ್ಯಮದ ಹೆಸರಿನಲ್ಲಿ ಇತರರು ಭೇಟಿ ನೀಡಿ, ಮಾಹಿತಿ ಕೇಳುವ ಅಥವಾ ಅಧಿಕಾರಿ, ಸಿಬ್ಬಂದಿಗಳಿಗೆ ಮಾಹಿತಿ ಹೆಸರಿನಲ್ಲಿ ಹೆದರಿಸುವ, ಹಣ ಕೇಳುವ ಘಟನೆಗಳು ಜರುಗುತ್ತವೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದಾಗ ಧಾರವಾಡ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಕಡಿಮೆ. ಆದರೂ ಅಧಿಕೃತ ಪತ್ರಕರ್ತರಿಗೆ ವೃತ್ತಿ ದೃಷ್ಟಿಯಿಂದ ಸಿಗಬೇಕಾದ ಮಾಹಿತಿ ಮತ್ತು ಗೌರವ ನೀಡಲು ಅಧಿಕಾರಿ, ಸಿಬ್ಬಂದಿಗಳಿಗೆ ಮಾಧ್ಯಮದ ಕಾರ್ಯ ಚಟುವಟಿಕೆಗಳ ಕುರಿತು ಮತ್ತು ಮಾಧ್ಯಮ ಪ್ರತಿನಿಧಿಗಳ ಬಗ್ಗೆ ತಿಳಿಸುವ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಸರ್ಕಾರದ ಯೋಜನೆ, ಬಜೆಟ್ ಸೇರಿದಂತೆ ವಿವಿಧ ವಿಷಯಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಮಹತ್ತರ ಜವಾಬ್ದಾರಿ ಮಾಧ್ಯಮಗಳ ಮೇಲಿದೆ. ದೇಶದ ನಾಗರಿಕರಿಗೆ ಸಿಗುವ ಅವಕಾಶಗಳ ಬಗ್ಗೆ ತಿಳಿಯಪಡಿಸಲಾಗುವುದು. ಪ್ರಜಾಪ್ರಭುತ್ವದಲ್ಲಿ ಮಾಧ್ಯಮಕ್ಕೆ ತನ್ನದೇ ಘನತೆ, ಸ್ಥಾನವಿದೆ. ಕೆಲವು ಸ್ವಾತಂತ್ರ್ಯ ಹೋರಾಟದ ನಾಯಕರು ಲೇಖನಿ ಮತ್ತು ಪತ್ರಿಕೆಗಳ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದ್ದಾರೆ. ಹೊಸ ಹೊಸ ತಂತ್ರಜ್ಞಾನದ ಬಳಕೆ ಬಗ್ಗೆ ಅರಿತುಕೊಳ್ಳಬೇಕಿದೆ ಎಂದು ತಿಳಿಸಿದರು.
ಪತ್ರಕರ್ತರ ಸಂಘ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಬಂಡು ಕುಲಕರ್ಣಿ, ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಸ್ಥಾನಿಕ ಸಂಪಾದಕರಾದ ಮೋಹನ ಹೆಗಡೆ, ಕನ್ನಡಪ್ರಭ ಪತ್ರಿಕೆಯ ಸ್ಥಾನಿಕ ಸಂಪಾದಕ ಮಲ್ಲಿಕಾರ್ಜುನ ಸಿದ್ದಣ್ಣನವರ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸ್ವಾಗತಿಸಿ, ಮಾತನಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಡಾ. ಸುರೇಶ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ ಜೆ.ಅಬ್ಬಾಸ್ ಮುಲ್ಲಾ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗುರು ಭಾಂಡಗೆ, ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಬ್ಯೂರೋ ಮುಖ್ಯಸ್ಥ ವೆಂಕಟರಾಜು ಕೆ.ಜಿ., ವಿಜಯವಾಣಿ ದಿನಪತ್ರಿಕೆಯ ಸ್ಥಾನಿಕ ಸಂಪಾದಕ ಪ್ರಕಾಶ ಶೇಟ್ ವೇದಿಕೆಯಲ್ಲಿ ಇದ್ದರು.
ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೆ.ಸಿ. ಭದ್ರಣ್ಣವರ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಶ್ರೀಪಾದ ಕುಲಕರ್ಣಿ, ಜಿ.ಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ವಿವಿಧ ಪತ್ರಿಕೆಗಳ ಸ್ಥಾನಿಕ ಸಂಪಾದಕರಾದ ವಿಠ್ಠಲದಾಸ್ ಕಾಮತ್, ಷಣ್ಮುಖ ಕೋಳಿವಾಡ, ಗಿರೀಶ ಪಟ್ಟಣಶೆಟ್ಟಿ, ವೆಂಕಟೇಶ ಪ್ರಭು, ರಾಹುಲ ಬೆಳಗಲಿ ಹಾಗೂ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಪ್ರತಿನಿಧಿಗಳು, ಧಾರವಾಡ ಪತ್ರಕರ್ತರು ಭಾಗವಹಿಸಿದ್ದರು.
ವಾರ್ತಾ ಇಲಾಖೆಯ ಸಿಬ್ಬಂದಿ ಕಾವ್ಯಾ ಗೌಡರ ಪ್ರಾರ್ಥಿಸಿದರು. ರವಿ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.



