ಬೆಂಗಳೂರು: ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್‌ಕಾರಕ ಅಂಶಗಳಿಲ್ಲ. ಲ್ಯಾಬ್ ಪರೀಕ್ಷಾ ವರದಿ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಮೊಟ್ಟೆ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ರವಾನೆ ಮಾಡಲಾಗಿತ್ತು. ಇದೀಗ ವರದಿ ಲಭ್ಯವಾಗಿದ್ದು, ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆಯಾಗಿಲ್ಲ.
ಮೊಟ್ಟೆ ಸೇವನೆಗೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ. ಈ ಕುರಿತು ಎಫ್‌ಎಸ್‌ಎಸ್‌ಎಐ ಸಹ ಸ್ಪಷ್ಟನೆ ನೀಡಿದ್ದು, ಜನರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಸಚಿವರು ತಿಳಿಸಿದ್ದಾರೆ. ಇದೇ ವೇಳೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸೇವೆ ಕಡಿತ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,
ಕಡಿಮೆ ಸಂಖ್ಯೆಯಲ್ಲಿ ರೋಗಿಗಳು ಬರುತ್ತಿರುವ ಕೇಂದ್ರಗಳಿಂದ ವೈದ್ಯರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಲಾಗುವುದು ಎಂದು ಹೇಳಿದರು. ಸ್ಪೆಷಲಿಸ್ಟ್ ವೈದ್ಯರನ್ನು ಶಿಫ್ಟ್ ಮಾಡಿ, ಅವರ ಬದಲು ಇಬ್ಬರು ಎಂಬಿಬಿಎಸ್ ವೈದ್ಯರನ್ನು ನಿಯೋಜಿಸಲಾಗುತ್ತದೆ. ಯಾವುದೇ ಸಮುದಾಯ ಆರೋಗ್ಯ ಕೇಂದ್ರಗಳನ್ನು ಮುಚ್ಚುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಸ್ಪೆಷಲಿಸ್ಟ್ ವೈದ್ಯರ ವರ್ಗಾವಣೆ ನಂತರವೂ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 24 ಗಂಟೆಗಳ ಆರೋಗ್ಯ ಸೇವೆ ಮುಂದುವರಿಯಲಿದೆ ಎಂದು ದಿನೇಶ್ ಗುಂಡೂರಾವ್ ಭರವಸೆ ನೀಡಿದರು.



