ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ 8 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.
ಘಟನೆಗೆ ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೃತ ಬಾಲಕಿಯನ್ನು ಪೆರೇಸಂದ್ರ ಗ್ರಾಮದ ಚಂದ್ರಿಕಾ ಮತ್ತು ನವೀನ್ ದಂಪತಿಯ ಪುತ್ರಿ ಶಶಿಕಲಾ (8) ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ ಶಶಿಕಲಾ ತೀವ್ರ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದ್ದಳು. ಕೂಡಲೇ ಆಕೆಯನ್ನು ಸಮೀಪದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಇರಲಿಲ್ಲ. ಅಗತ್ಯ ವೈದ್ಯಕೀಯ ಸೌಲಭ್ಯಗಳೂ ಲಭ್ಯವಿರಲಿಲ್ಲ. ಕರ್ತವ್ಯದಲ್ಲಿದ್ದ ನರ್ಸ್ ಚಿಕಿತ್ಸೆ ನೀಡಿದರೂ ಬಾಲಕಿಯನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಘಟನೆಯ ನಂತರ ಗ್ರಾಮಸ್ಥರು ಆಸ್ಪತ್ರೆ ಎದುರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಆಸ್ಪತ್ರೆಯಲ್ಲಿ ವೈದ್ಯರನ್ನು ನೇಮಿಸಬೇಕು ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಮಾಹಿತಿ ತಿಳಿದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚೇತನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, “ಬಾಲಕಿಯನ್ನು ಆಸ್ಪತ್ರೆಗೆ ಕರೆತಂದಾಗಲೇ ನಾಡಿ ಮಿಡಿತ ಇರಲಿಲ್ಲ. ಉಸಿರಾಟವೂ ತುಂಬಾ ಕಡಿಮೆಯಾಗಿತ್ತು. ಕರ್ತವ್ಯದಲ್ಲಿದ್ದ ಸಿಬ್ಬಂದಿ ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿ ಮೇಲ್ದರ್ಜೆಯ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಸಾವಿನ ನಿಖರ ಕಾರಣ ತಿಳಿಯಲಿದೆ. ಜಿಲ್ಲೆಯಲ್ಲಿ ವೈದ್ಯರ ಕೊರತೆ ಇದೆ,” ಎಂದು ಹೇಳಿದರು.
ಕುಟುಂಬಸ್ಥರು ಆಸ್ಪತ್ರೆಯ ನಿರ್ಲಕ್ಷ್ಯವೇ ಬಾಲಕಿಯ ಸಾವಿಗೆ ಕಾರಣ ಎಂದು ಆರೋಪಿಸುತ್ತಿದ್ದರೆ, ಕರ್ತವ್ಯದಲ್ಲಿದ್ದ ಸಿಬ್ಬಂದಿ ನಿಯಮದಂತೆ ಚಿಕಿತ್ಸೆ ನೀಡಿದ್ದಾರೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಪೆರೇಸಂದ್ರ ಗ್ರಾಮವು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್ ಹಾಗೂ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ತವರು ಗ್ರಾಮವಾಗಿದೆ. ಅಂತಹ ಗ್ರಾಮದಲ್ಲಿಯೇ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.



