ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಅತ್ಯಂತ ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸುವ ಜೊತೆಗೆ ಚುನಾವಣಾ ಜಾಗೃತಿಯನ್ನು ತಳಮಟ್ಟಕ್ಕೆ ತಲುಪಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಮತದಾರರ ಜಾಗೃತಿ ಮೂಡಿಸಲು ಶಾಲೆ, ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇಎಲ್‌ಸಿ ಕ್ಲಬ್‌ಗಳ ಮೂಲಕ ಜೂನ್ 30ರೊಳಗೆ ಕಡ್ಡಾಯವಾಗಿ ಚುನಾವಣಾ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಮತದಾನದ ಮಹತ್ವದ ಅರಿವು ಮೂಡಿಸಲು ‘ಕ್ಯಾಂಪಸ್ ಅಂಬಾಸಿಡರ್’ಗಳನ್ನು ನೇಮಕ ಮಾಡಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ವ್ಯಾಪ್ತಿಯಲ್ಲಿ ‘ವೋಟರ್ಸ್ ಅವೇರ್ನೆಸ್ ಫೋರಂ’ ಸ್ಥಾಪಿಸಿ, ಸ್ವೀಪ್ (SVEEP) ಹಾಗೂ ಎಸ್‌ಐಆರ್‌ಗೆ ಸಂಬಂಧಿಸಿದ ಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ನಡೆಸಬೇಕು. ಎಲ್ಲಾ ಇಲಾಖೆಗಳು ಸೋಮವಾರದೊಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಪ್ರತಿ ಬೂತ್‌ನಲ್ಲಿ ಚುನಾವಣಾ ಪಾಠಶಾಲೆ
ಮತದಾರರಲ್ಲಿ ಚುನಾವಣಾ ಸಾಕ್ಷರತೆ ಹೆಚ್ಚಿಸುವ ಉದ್ದೇಶದಿಂದ ಪ್ರತಿ ಬೂತ್ ಮಟ್ಟದಲ್ಲಿ ‘ಚುನಾವಣಾ ಪಾಠಶಾಲೆ’ ರಚಿಸಲಾಗುವುದು. ಬಿಎಲ್‌ಒಗಳು ಇದರ ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದು, ಸ್ಥಳೀಯ ಯುವಕರು, ರೈತರು, ಮಹಿಳೆಯರು ಹಾಗೂ ವಿವಿಧ ಸಮುದಾಯದ ಸದಸ್ಯರನ್ನು ಒಳಗೊಂಡು ಜಾಗೃತಿ ಮೂಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮತದಾರರ ಪಟ್ಟಿಯ ನೈಜತೆ ಕಾಪಾಡುವ ಉದ್ದೇಶದಿಂದ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕು. ಪ್ರತಿ ಮನೆಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿ ವಿವರ ಪರಿಶೀಲಿಸಬೇಕು. ಪರಿಶೀಲನೆ ಪೂರ್ಣಗೊಂಡ ಮನೆಗಳಿಗೆ ಚುನಾವಣಾ ಆಯೋಗದ ವಿಶೇಷ ಸ್ಟಿಕ್ಕರ್ ಅಂಟಿಸಲಾಗುವುದು. ಮೃತಪಟ್ಟವರು ಅಥವಾ ಸ್ಥಳಾಂತರಗೊಂಡವರ ಹೆಸರನ್ನು ನಿಯಮಾನುಸಾರ ಕೈಬಿಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನೂ ವಿವರಿಸಲಾಯಿತು. ಜೂನ್ 20ರಿಂದ 29ರವರೆಗೆ ಪೂರ್ವಸಿದ್ಧತೆ ಮತ್ತು ತರಬೇತಿ ನಡೆಯಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಬಿಎಲ್‌ಒಗಳ ಮೂಲಕ ಮನೆ-ಮನೆ ಸಮೀಕ್ಷೆ ನಡೆಸಲಾಗುವುದು. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಸೆಪ್ಟೆಂಬರ್ 4ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ ಮಾತನಾಡಿ, ಜಿಲ್ಲೆಯಲ್ಲಿ 536 ಇಎಲ್‌ಸಿ ಕ್ಲಬ್‌ಗಳಿದ್ದು, ಅವುಗಳಲ್ಲಿ 402 ಕ್ಲಬ್‌ಗಳು ಸಕ್ರಿಯವಾಗಿವೆ. ಉಳಿದ ಕ್ಲಬ್‌ಗಳನ್ನು ಶೀಘ್ರದಲ್ಲೇ ಸಕ್ರಿಯಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿಗೆ ಸಂಬಂಧಿಸಿದ ದೂರುಗಳು ಅಥವಾ ಮಾಹಿತಿಗಾಗಿ ಸಾರ್ವಜನಿಕರು ಚುನಾವಣಾ ಸಹಾಯವಾಣಿ 1950ಕ್ಕೆ ಕರೆ ಮಾಡಬಹುದು ಎಂದು ತಿಳಿಸಲಾಯಿತು.
“ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಪಾರದರ್ಶಕತೆ ಮತ್ತು ನಿಖರತೆಗೆ ಮೊದಲ ಆದ್ಯತೆ ನೀಡಬೇಕು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಬಿಟ್ಟುಹೋಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.”
– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ



