ಬೆಂಗಳೂರು;- ಡಿಕೆಶಿ-ಜಾರಕಿಹೊಳಿ ನಡುವೆ ವೈಯಕ್ತಿಕವಾಗಿ ವೈಮನಸ್ಸಿರಬಹುದು. ಆದರೆ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಮತವಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ ಹಾಗೂ ಸಚಿವ ಸತೀಶ ಜಾರಕಿಹೊಳಿ ಅವರ ನಡುವೆ ವೈಯಕ್ತಿಕವಾಗಿ ವೈಮನಸ್ಸು ಇರಬಹುದು. ಆದರೆ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಮತವಿಲ್ಲ ಎಂದರು.
ಇನ್ನೂ ಬೆಳಗಾವಿ ಶಾಸಕರ ಅಸಮಾಧಾನ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಐದು ವರ್ಷದವರೆಗೂ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್ ಸರ್ಕಾರ ಉಳಿಯುವುದಿಲ್ಲ ಎಂಬ ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಬಿಜೆಪಿಯವರು ಬಸ್ ನಿಲ್ದಾಣದಲ್ಲಿ ಕುಳಿತು ಭವಿಷ್ಯ ನುಡಿಯುತ್ತಾರೆ. ಬಿಜೆಪಿ ಕಳೆದ ಚುನಾವಣೆಯಲ್ಲಿ ಎಷ್ಟು ಸ್ಥಾನ ಪಡೆದಿದೆ ಎಂಬುದನ್ನು ನೆನಪಿಸಿಕೊಳ್ಳಲಿ ಎಂದರು.



