ಬೆಂಗಳೂರು: ಸ್ಯಾಂಡಲ್‌ವುಡ್ ಹಿರಿಯ ನಟ ದೊಡ್ಡಣ್ಣ ಅವರ ನಿಧನವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಬದುಕಿರುವ ನಟನನ್ನು ‘ಮೃತರು’ ಎಂದು ಘೋಷಿಸಿ ನಕಲಿ ಶ್ರದ್ಧಾಂಜಲಿ ಪೋಸ್ಟ್ ಹಂಚಿದ ಕಿಡಿಗೇಡಿಗಳ ವಿರುದ್ಧ ಸ್ವತಃ ದೊಡ್ಡಣ್ಣ ಅವರೇ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
ಇತ್ತೀಚೆಗೆ ‘ಪಬ್ಲಿಕ್ ಫ್ರೆಂಡ್’ ಎಂಬ ಸಾಮಾಜಿಕ ಜಾಲತಾಣ ಖಾತೆಯಲ್ಲಿ ದೊಡ್ಡಣ್ಣ ಅವರ ನಿಧನಕ್ಕೆ ಸಂಬಂಧಿಸಿದಂತೆ ಶ್ರದ್ಧಾಂಜಲಿ ಸಂದೇಶವನ್ನು ಹಂಚಲಾಗಿತ್ತು. ಈ ಪೋಸ್ಟ್ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದವರಲ್ಲಿ ಆತಂಕ ಸೃಷ್ಟಿಸಿತ್ತು. ಬಳಿಕ ದೊಡ್ಡಣ್ಣ ಅವರೇ ಮಾಧ್ಯಮಗಳ ಮುಂದೆ ಬಂದು ತಾವು ಆರೋಗ್ಯವಾಗಿದ್ದು, ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸ್ಪಷ್ಟನೆ ನೀಡಿದ್ದರು.
ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿ ದೊಡ್ಡಣ್ಣ ಅವರು ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಮಾನಸಿಕವಾಗಿ ತೊಂದರೆ ನೀಡಲಾಗಿದೆ ಎಂದು ಆರೋಪಿಸಿರುವ ಅವರು, ಕಿಡಿಗೇಡಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸೈಬರ್ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ‘ಪಬ್ಲಿಕ್ ಫ್ರೆಂಡ್’ ಖಾತೆಯ ಐಪಿ ವಿಳಾಸ ಹಾಗೂ ಸಂಬಂಧಿಸಿದವರ ಗುರುತಿಗಾಗಿ ತನಿಖೆ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಮತ್ತು ವೀವ್ಸ್‌ಗಾಗಿ ಇಂತಹ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.



