ಬೆಂಗಳೂರು:- ಈ ಬಾರಿಯ ಅಧಿವೇಶನವನ್ನು 20 ದಿನಗಳು ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು. ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ಕಾಲ್ತುಳಿತ ಪ್ರಕರಣ ಸೇರಿದಂತೆ ಹಲವಾರು ಹೋರಾಟಗಳಲ್ಲಿ ಒಂದಾಗಿ ಕೆಲಸ ಮಾಡಿದ್ದೇವೆ. ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಎರಡೂ ಪಕ್ಷಗಳು ಕಿವಿ ಹಿಂಡುವ ಕೆಲಸ ಮಾಡಿವೆ. ಈಗ ಬೆಳಗಾವಿ ಅಧಿವೇಶನದಲ್ಲಿ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಬೇಕೆಂದು ಚರ್ಚಿಸಲಾಗಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದು ತಿಳಿಸಿದರು.
ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗಬೇಕಿದೆ. ಆದರೆ, ಕೇವಲ ಬೆಂಗಳೂರು ಸಂಬಂಧಿತ ಮಸೂದೆಗಳನ್ನು ತರುತ್ತಿದ್ದಾರೆ. ಹೀಗಾದರೆ ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಸುವ ಅಗತ್ಯವಿಲ್ಲ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕಿದೆ. 8 ದಿನದ ಬದಲು 20 ದಿನಗಳ ಕಾಲ ಅಧಿವೇಶನ ನಡೆಸಬೇಕೆಂದು ಒತ್ತಾಯಿಸುತ್ತಿದ್ದೇವೆ. ಕಳೆದ ಸಲ ಕೊನೆಯ ಎರಡು-ಮೂರು ದಿನ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗಿತ್ತು. ನಂತರ ಸಿಎಂ ಸಿದ್ದರಾಮಯ್ಯ ಒಂದಷ್ಟು ಭರವಸೆಗಳನ್ನು ನೀಡಿದ್ದರು. ಅದನ್ನು ಇಂದಿಗೂ ಈಡೇರಿಸಿಲ್ಲ ಎಂದರು.



