ಮಂಗಳೂರು: ಮಂಗಳೂರಿನ ಕುಡುಪು ಬಳಿ ನಡೆದ ಗುಂಪು ಹಲ್ಲೆಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದೇ ಕಾರಣ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ಈವರೆಗೆ ಒಟ್ಟು 23 ಜನರನ್ನು ಬಂಧಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಇನ್ನೂ ಇದರ ನಡುವೆ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಕರ್ತವ್ಯ ಲೋಪ ಆರೋಪದಡಿ ಇನ್ಸ್‌ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ಸ್‌ಟೇಬಲ್ ಚಂದ್ರ.ಪಿ ಮತ್ತು ಕಾನ್ಸ್‌ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ. ಮೂವರ ವಿರುದ್ಧ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಆರೋಪ ಕೇಳಿ ಬಂದಿತ್ತು.
ಶಿವಕುಮಾರ್ ಆರಂಭದಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿದ್ದರು. ವಿವಾದ ದೊಡ್ಡದಾದ ಮೇಲೆ ಕೊಲೆ ಪ್ರಕರಣ ದಾಖಲಿಸಿದ್ದರು. ಇದಾದ ಬಳಿಕ ಶಿವಕುಮಾರ್ ಅವರನ್ನು ಅಮಾನತು ಮಾಡುವಂತೆ ಗೃಹ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದರು.