ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಆಲಿಕಲ್ಲು ಮಳೆಯ ಅರ್ಭಟ ಮುಂದುವರಿದಿದ್ದು, ಇಂದೂ ಸಹ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಇಂದು ಗರಿಷ್ಠ 42 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ದಾಖಲಾಗುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳವರೆಗೆ ಇದೇ ರೀತಿಯ ಬಿಸಿಗಾಳಿ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಇದೇ ವೇಳೆ ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದ ಕೆಲ ಭಾಗಗಳಾದ ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಶುಷ್ಕ ವಾತಾವರಣ ಇರಲಿದೆ.
ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



