ವಿಜಯಸಾಕ್ಷಿ ಸುದ್ದಿ,ಲಕ್ಷ್ಮೇಶ್ವರ/ಗದಗ : ಎಐಸಿಸಿ ಶುಕ್ರವಾರ ಬಿಡುಗಡೆಗೊಳಿಸಿರುವ 39 ಲೋಕಸಭಾ ಕ್ಷೇತ್ರಗಳ ಪೈಕಿ ರಾಜ್ಯದ ಹಾವೇರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಆನಂದಸ್ವಾಮಿ ಗಡ್ಡದೇವರಮಠ ಅಧಿಕೃತವಾಗಿ ಸ್ಥಾನ ಪಡೆದುಕೊಂಡಿದ್ದಾರೆ.
ಈ ಹಿಂದೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರ ಹೆಸರು ಕೇಳಿ ಬಂದಿತ್ತಾದರೂ, ಮಾಜಿ ಸಚಿವ ಹಾಗೂ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ, ಮಾಜಿ ಸಂಸದ ಮಂಜುನಾಥ ಕುಣ್ಣೂರ ಸೇರಿ ಹಲವಾರು ಘಟಾನುಘಟಿ ಆಕಾಂಕ್ಷಿಗಳ ನಡುವೆ ಹಾವೇರಿ ಲೋಕಸಭಾ ಟಿಕೆಟ್ ಪಡೆದುಕೊಳ್ಳುವಲ್ಲಿ ಆನಂದಸ್ವಾಮಿ ಗಡ್ಡದೇವರಮಠ ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್‌ನ ಯುವ ಮುಖಂಡರಾಗಿರುವ ಆನಂದಸ್ವಾಮಿ ಗಡ್ಡದೇವರಮಠ ಅವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠರ ಪುತ್ರರಾಗಿದ್ದು, ರಾಜಕೀಯ ಕುಟುಂಬದ ಹಿನ್ನೆಲೆಯನ್ನು ಹೊಂದಿದ್ದಾರೆ. ಬಿಎಸ್‌ಸಿ ಪದವಿಧರರಾಗಿರುವ ಆನಂದಸ್ವಾಮಿ ಗಡ್ಡದೇವರಮಠ 1998ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ, 2008ರಲ್ಲಿ ರಾಜ್ಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ, 2019ರಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಹಾವೇರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಆನಂದಸ್ವಾಮಿ ಗಡ್ಡದೇವರಮಠ ಸೇರಿದಂತೆ ಸಚಿವ ಎಚ್.ಕೆ. ಪಾಟೀಲ, ವಿ.ಪ ಸದಸ್ಯ ಸಲೀಂ ಅಹ್ಮದ್, ರೋಣದ ಐ.ಎಸ್. ಪಾಟೀಲ ಹೆಸರು ಕೇಳಿಬಂದಿತ್ತು. ಅಂತಿಮವಾಗಿ ಆನಂದಸ್ವಾಮಿ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾವೇರಿ ಕ್ಷೇತ್ರವು ಗದಗ ಜಿಲ್ಲೆಯ 3 ಹಾಗೂ ಹಾವೇರಿ ಜಿಲ್ಲೆಯ 5 ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡ ಸಂಕೀರ್ಣ ಲೋಕಸಭಾ ಕ್ಷೇತ್ರವಾಗಿದೆ. ಸದ್ಯ ಒಟ್ಟು 8 ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶಿರಹಟ್ಟಿ ಮೀಸಲು ಕ್ಷೇತ್ರ ಹೊರತುಪಡಿಸಿ ಇನ್ನುಳಿದ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಆನಂದಸ್ವಾಮಿ ಅವರ ತಂದೆ ಜಿ.ಎಸ್. ಗಡ್ಡದೇವರಮಠ ಅವರು ಸತತ ಎರಡು ಬಾರಿ ಶಿರಹಟ್ಟಿ ಕ್ಷೇತ್ರದ ಶಾಸಕರಾಗಿದ್ದರು. ಸದ್ಯ ಶಿರಹಟ್ಟಿ ಕ್ಷೇತ್ರದ ಯುವ ನಾಯಕ ಆನಂದಸ್ವಾಮಿ ಗಡ್ಡದೇವರಮಠ ಕಾಂಗ್ರೆಸ್ ಅಭ್ಯರ್ಥಿಯಾಗಿರುವುದು ಅಚ್ಚರಿ ಮೂಡಿಸಿದೆ.
ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ನಾನು ಮತ್ತು ನನ್ನ ತಂದೆ ಸಲ್ಲಿಸಿದ ಸೇವೆ ಪರಿಗಣಿಸಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ಕ್ಷೇತ್ರದ ಎಲ್ಲ ಶಾಸಕರ, ಹಿರಿಯರ, ಮತದಾರರ ಮನ ಗೆದ್ದು, ಗೆಲುವು ಸಾಧಿಸುವ ಮೂಲಕ ಪಕ್ಷ ನನ್ನ ಮೇಲೆ ಇಟ್ಟ ನಂಬಿಕೆ ಉಳಿಸಿಕೊಳ್ಳುತ್ತೇನೆ.
– ಆನಂದಸ್ವಾಮಿ ಗಡ್ಡದೇವರಮಠ.
2011ರಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರೂ ಜಿಲ್ಲೆಯ ಸಕ್ರಿಯ ರಾಜಕಾರಣದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಮಾಜಿ ಸಂಸದ ಮಂಜುನಾಥ ಕುಣ್ಣೂರ, ಕೆಪಿಸಿಸಿ ಪದವೀಧರ ಘಟಕದ ರಾಜ್ಯಾಧ್ಯಕ್ಷ ಡಾ. ಆರ್.ಎಂ. ಕುಬೇರಪ್ಪ, ಮಾಜಿ ಸಚಿವ ಬಸವರಾಜ ಶಿವಣ್ಣನವರ, ಹಾವೇರಿ ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರು ಆಕಾಂಕ್ಷಿಗಳ ಪಟ್ಟಿಯಲ್ಲಿದ್ದರು.