ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಂಗನಾಥಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಕಳೆದ ಎರಡು ದಿನಗಳಿಂದ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಹಾಗೂ ರೈತರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಬಫರ್ ವಲಯದ ವ್ಯಾಪ್ತಿಗೆ ಬರುವ ರಂಗನಾಥಪುರ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಹುಲಿ ಸಂಚರಿಸುತ್ತಿರುವುದು ಕಂಡುಬಂದಿದೆ. ಕೃಷಿ ಚಟುವಟಿಕೆಗಳಿಗೆ ತೆರಳುವ ರೈತರು ಇದೀಗ ಭಯದಿಂದ ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.
ಇಂದು ಬೆಳಗ್ಗೆ ಕೆಲ ರೈತರು ಕಾರಿನಲ್ಲಿ ತಮ್ಮ ಜಮೀನಿನ ಕಡೆಗೆ ತೆರಳುತ್ತಿದ್ದ ವೇಳೆ, ಜಮೀನಿನ ಸಮೀಪದಲ್ಲೇ ಹುಲಿ ಹಾಯಾಗಿ ಓಡಾಡುತ್ತಿರುವುದು ಕಂಡುಬಂದಿದೆ. ತಕ್ಷಣ ಎಚ್ಚೆತ್ತ ರೈತರು ಹುಲಿಯ ಓಡಾಟದ ದೃಶ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸ್ಥಳೀಯವಾಗಿ ವೈರಲ್ ಆಗುತ್ತಿದೆ.
ಗ್ರಾಮದ ಸಮೀಪದಲ್ಲೇ ಹುಲಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳನ್ನು ಮೇಯಿಸಲು ಹಾಗೂ ಜಮೀನಿನಲ್ಲಿ ಕೆಲಸ ಮಾಡಲು ಗ್ರಾಮಸ್ಥರು ಆತಂಕ ಪಡುತ್ತಿದ್ದಾರೆ.
ಈ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಹುಲಿಯ ಚಲನವಲನದ ಮೇಲೆ ನಿಗಾ ವಹಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಬಂಡೀಪುರ ಅರಣ್ಯ ಪ್ರದೇಶದ ಸುತ್ತಮುತ್ತ ಆಗಾಗ್ಗೆ ವನ್ಯಜೀವಿಗಳ ಸಂಚಾರ ಕಂಡುಬರುತ್ತಿದ್ದು, ಇದೀಗ ರಂಗನಾಥಪುರದಲ್ಲಿ ಹುಲಿ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.



