ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ…
ಗದಗ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಇಟಗಿ ಗ್ರಾಮದ ಸಮೀಪ ನಡೆದಿದೆ.
ಮೃತರನ್ನು ರೋಣ ತಾಲೂಕಿನ ಹೊಸಳ್ಳಿ ಗ್ರಾಮದ ಶರಣಪ್ಪ ಜಾಲಿಹಾಳ (65) ಹಾಗೂ ಸುರೇಶ ತಳವಾರ (59) ಎಂದು ಗುರುತಿಸಲಾಗಿದೆ.
ರೋಣದಿಂದ ಗಜೇಂದ್ರಗಡ ಕಡೆಗೆ ಮಣ್ಣು ಸಾಗಿಸಿಕೊಂಡು ಟಿಪ್ಪರ್ ಅತಿವೇಗವಾಗಿ ತೆರಳುತ್ತಿದ್ದ ವೇಳೆ, ಇಟಗಿ ಕ್ರಾಸ್ನಿಂದ ಹೊಸಳ್ಳಿ ಕಡೆಗೆ ತೆರಳುತ್ತಿದ್ದ ಬೈಕ್ಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತದ ನಂತರ ಟಿಪ್ಪರ್ ಅನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳ ಕುರಿತು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಟಿಪ್ಪರ್ ಚಾಲಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.



