ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ಜಿಮ್ ಟ್ರೈನರ್ ಆಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಬ್ಲಾಕ್‌ಮೇಲ್ ಮತ್ತು ಕಿರುಕುಳ ತಾಳಲಾರದೆ ದಿಲೀಪ್ (28) ಎಂಬ ಯುವಕ ನೇಣಿಗೆ ಶರಣಾಗಿರುವುದಾಗಿ ತಿಳಿದುಬಂದಿದೆ.
ವಾಜರಹಳ್ಳಿಯ ನಿವಾಸಿಯಾಗಿದ್ದ ದಿಲೀಪ್ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮಾಡುತ್ತಿದ್ದ ಜಿಮ್‌ಗೆ ಫಿಟ್ನೆಸ್‌ಗಾಗಿ ಬರುತ್ತಿದ್ದ ಯೋಗಿತಾ ಎಂಬ ವಿವಾಹಿತ ಮಹಿಳೆಯೊಂದಿಗೆ ಪರಿಚಯ ಬೆಳೆದು, ಬಳಿಕ ಅದು ಸಂಬಂಧಕ್ಕೆ ತಿರುಗಿತ್ತು ಎನ್ನಲಾಗಿದೆ. ಈ ವಿಚಾರ ಒಂದು ವರ್ಷದ ಹಿಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ, ಬಳಿಕ ಸಮಾಧಾನಗೊಂಡಿತ್ತು ಎಂದು ತಿಳಿದುಬಂದಿದೆ.
ಆದರೆ, ಬಳಿಕವೂ ಮಹಿಳೆ ದಿಲೀಪ್ ಅವರನ್ನು ಬ್ಲಾಕ್‌ಮೇಲ್ ಮಾಡುತ್ತಾ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಮೃತನ ತಂದೆ ರಮೇಶ್ ಗಂಭೀರ ಆರೋಪ ಮಾಡಿದ್ದು, “ನನ್ನ ಮಗನ ಹೆಸರಿನಲ್ಲಿದ್ದ ಮನೆಯನ್ನು ತನ್ನ ಮಗನ ಹೆಸರಿಗೆ ಬರೆಸುವಂತೆ ಒತ್ತಾಯಿಸುತ್ತಿದ್ದಳು. ಈ ಕಾರಣದಿಂದ ಮನನೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ದೂರಿದ್ದಾರೆ.
ಘಟನೆಗೆ ಮುನ್ನ ದಿಲೀಪ್ ಮಹಿಳೆಗೆ ವಿಡಿಯೋ ಕಾಲ್ ಮಾಡಿ ತನ್ನ ನಿರ್ಧಾರ ತಿಳಿಸಿದ್ದಾನೆ ಎನ್ನಲಾಗಿದೆ. ಈ ವಿಷಯ ತಿಳಿದು ಮಹಿಳೆ ದಿಲೀಪ್ ಸಹೋದರಿಗೆ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾಳೆ. ತಕ್ಷಣ ಕುಟುಂಬಸ್ಥರು ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ ದಿಲೀಪ್ ನೇಣಿನ ಕುಣಿಕೆಯಲ್ಲಿ ತೂಗುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣದ ಮಾಹಿತಿ ಪಡೆದ ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೊಬೈಲ್ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.



