ಮೈಸೂರು: ಮೈಸೂರು ರಾಜವಂಶದ ಆಸ್ತಿ ವಿಚಾರವಾಗಿ ನಡೆಯುತ್ತಿರುವ ಚರ್ಚೆಗೆ ಸಂಸದ ಯದುವೀರ್ ಒಡೆಯರ್ ಪ್ರತಿಕ್ರಿಯಿಸಿದ್ದು, ಆಸ್ತಿ ಯಾರಿಗೆ ಸೇರಬೇಕು ಎಂಬುದನ್ನು ನ್ಯಾಯಾಲಯವೇ ನಿರ್ಧರಿಸಲಿದೆ. ಹೀಗಾಗಿ ಈ ವಿಚಾರವನ್ನು ಸಾರ್ವಜನಿಕವಾಗಿ ಚರ್ಚಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜವಂಶದ ಆಸ್ತಿಗಳನ್ನು ಪಡೆದುಕೊಳ್ಳುವ ವಿಚಾರದಲ್ಲಿ ಶಾಸಕಾಂಗ ಮತ್ತು ಕಾರ್ಯಾಂಗದ ದುರುಪಯೋಗವಾಗಿದೆ ಎಂದು ಆರೋಪಿಸಿದರು. ಆಸ್ತಿಗಳು ರಾಜವಂಶಕ್ಕೆ ಸೇರಿವೆಯೋ ಅಥವಾ ಸರ್ಕಾರಕ್ಕೆ ಸೇರಿವೆಯೋ ಎಂಬುದರ ಬಗ್ಗೆ ನ್ಯಾಯಾಲಯ ಅಂತಿಮ ತೀರ್ಪು ನೀಡಲಿದೆ. ಮೊದಲು ನ್ಯಾಯಾಲಯದ ತೀರ್ಪುಗಳು ಬರಲಿ. ಆನಂತರವಷ್ಟೇ ಈ ಬಗ್ಗೆ ಮಾತನಾಡುವುದು ಸೂಕ್ತ ಎಂದರು.
ಅರಮನೆ ಮತ್ತು ಸರ್ಕಾರದ ನಡುವೆ ಒಪ್ಪಂದ ನಡೆದ ಸಂದರ್ಭದಲ್ಲಿ ತಾನು ಬಾಲಕನಾಗಿದ್ದೆ. ಹೀಗಾಗಿ ಆ ಒಪ್ಪಂದದ ಸಂಪೂರ್ಣ ವಿವರಗಳು ತನಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ದಸರಾ ಆಚರಣೆಯಲ್ಲಿನ ಅವ್ಯವಸ್ಥೆಗಳ ಕುರಿತು ಮಾತನಾಡಿದ ಅವರು, ಪ್ರತಿ ವರ್ಷವೂ ದಸರಾ ಸಂದರ್ಭದಲ್ಲಿ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತವೆ. ಮುಂದಿನ ದಿನಗಳಲ್ಲಿ ಇಂತಹ ಲೋಪಗಳನ್ನು ಸರಿಪಡಿಸಿಕೊಳ್ಳಬೇಕಿದೆ. ಈ ಬಾರಿಯ ದಸರಾ ಮುಗಿದಿದ್ದು, ಈಗ ಮುಂದಿನ ಕಾರ್ಯಗಳತ್ತ ಗಮನಹರಿಸಬೇಕು. ಮುಗಿದ ವಿಚಾರವನ್ನೇ ಮತ್ತೆ ಮತ್ತೆ ಚರ್ಚಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಎಥೆನಾಲ್ ವಿವಾದದ ಬಗ್ಗೆ ಯದುವೀರ್ ಹೇಳಿದ್ದೇನು?
ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣದ ವಿಚಾರವಾಗಿ ನಡೆಯುತ್ತಿರುವ ಆರೋಪ-ಪ್ರತ್ಯಾರೋಪಗಳ ಬಗ್ಗೆಯೂ ಯದುವೀರ್ ಮಾತನಾಡಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಎಥೆನಾಲ್ ವಿಚಾರವನ್ನು ಮುನ್ನೆಲೆಗೆ ತರಲಾಗಿದೆ ಎಂದು ಹೇಳಿದರು.
ಎಥೆನಾಲ್ ಮಿಶ್ರಣದ ಬಗ್ಗೆ ಆರೋಪ ಮಾಡುವವರು ಸೂಕ್ತ ದಾಖಲೆಗಳನ್ನು ಒದಗಿಸಬೇಕು. ಯಾವುದೇ ಆಧಾರವಿಲ್ಲದೆ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಅವರು ಪ್ರತಿಕ್ರಿಯಿಸಿದರು.









