ಹಾಸನ: ವರ್ಷಕ್ಕೊಮ್ಮೆ ಮಾತ್ರ ಗರ್ಭಗುಡಿಯ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ.

ನಾಳೆ ಮಧ್ಯಾಹ್ನ 12 ಗಂಟೆಗೆ ದೇವಿಯ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ. ಹೀಗಾಗಿ ಇಂದು ರಾತ್ರಿ ವರೆಗೆ ಭಕ್ತರಿಗೆ ದೇವಿಯ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಈ ಬಾರಿ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರವೇ ಹರಿದುಬಂದಿದೆ. ಕಳೆದ 11 ದಿನಗಳಲ್ಲಿ ಬರೋಬ್ಬರಿ 25 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಹಿಂದಿನ ಎಲ್ಲಾ ವರ್ಷಗಳ ದಾಖಲೆಯನ್ನು ಹಿಂದಿಕ್ಕಿ ಈ ಬಾರಿ ಅತಿ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಹಾಸನಾಂಬೆ ದೇಗುಲಕ್ಕೆ ₹23.67 ಕೋಟಿ ಆದಾಯ!
ಭಕ್ತರ ಸಂಖ್ಯೆಯ ಜೊತೆಗೆ ದೇವಾಲಯದ ಆದಾಯದಲ್ಲೂ ಗಣನೀಯ ಏರಿಕೆಯಾಗಿದೆ. ಈವರೆಗೆ ಒಟ್ಟು 23 ಕೋಟಿ 67 ಲಕ್ಷ ರೂಪಾಯಿ ಆದಾಯ ಸಂಗ್ರಹವಾಗಿದೆ. ಟಿಕೆಟ್ ಮಾರಾಟ ಹಾಗೂ ಲಡ್ಡು ಪ್ರಸಾದದ ಮಾರಾಟದಿಂದ ಹೆಚ್ಚಿನ ಆದಾಯ ಬಂದಿದೆ.
ಇಂದು ದರ್ಶನಕ್ಕೆ ಕೊನೆಯ ಅವಕಾಶವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸುವ ನಿರೀಕ್ಷೆಯಿದೆ.









