ಚಿಕ್ಕಮಗಳೂರು: ಆಲ್ದೂರು ಸಮೀಪ ಪ್ರವಾಸಿ ವಾಹನ ಡಿಕ್ಕಿಯಾಗಿ ಅಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಅಪಘಾತದ ಬಳಿಕ ವಾಹನವನ್ನು ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಮೃತರನ್ನು ನವಮಿ (26) ಎಂದು ಗುರುತಿಸಲಾಗಿದ್ದು, ಅವರು ಆಲ್ದೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದರು.
ಅಪಘಾತಕ್ಕೆ ಕಾರಣವಾದ ವಾಹನವು ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ ಹಿನ್ನೆಲೆ, ಆಲ್ದೂರು ಹೋಬಳಿಯಲ್ಲಿ ನಡೆಯಬೇಕಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.



